ಸಾರಾಂಶ
ರಾಮನಗರ: ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರನ್ನು ಅಣಕವಾಡಿ ಅಪಮಾನಿಸಿದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಹಳೇ ಬಸ್ ನಿಲ್ದಾಣ ಬಳಿಯ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಸಂವಿಧಾನ ಪರ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾವಚಿತ್ರ ದಹಿಸಲು ಮುಂದಾದಾಗ ಪೊಲೀಸರು ಅಡ್ಡಿ ಪಡಿಸಿದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೂ ಪ್ರತಿಭಟನಾಕಾರರು ರಾಹುಲ್ ಗಾಂಧಿಯವರ ಭಾವಚಿತ್ರ ದಹಿಸಿದರು.ಸಂಸತ್‌ನ ಹೊರಗಡೆ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಸದಸ್ಯ ಕಲ್ಯಾಣ್ ಬ್ಯಾನರ್ಜಿ ಅವರು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಮಿಮಿಕ್ರಿ ಮಾಡಿ ಅವಮಾನಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ಇದು ಅತ್ಯಂತ ಖಂಡನೀಯ. ಈ ಕೂಡಲೇ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಸಂಸತ್‌ನ ಉಭಯ ಸದನಗಳಲ್ಲಿ ಸಭಾಧ್ಯಕ್ಷರ ಮನವಿಗೆ ಸ್ಪಂದಿಸದ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಮಾತ್ರವಲ್ಲದೆ ನಾಮಫಲಕಗಳನ್ನು ಪ್ರದರ್ಶಿಸಿದ್ದು, ನಿರಂತರ ಅಸಮರ್ಪಕ ನಡವಳಿಕೆಯಿಂದ ಅಮಾನತು ಮಾಡಲಾಗಿದೆ. ಪ್ರತಿಪಕ್ಷ ಸಂಸದರು ಸದನದಲ್ಲಿ ಗದ್ದಲ ಸೃಷ್ಟಿಸುವ ಕಲಾಪಕ್ಕೆ ಅಡ್ಡಿಪಡಿಸುವ ಪೂರ್ವಯೋಜಿತ ಕಾರ್ಯತಂತ್ರ ರೂಪಿಸುವ ಮೂಲಕ ಸುಗಮ ಕಲಾಪ ತಡೆಯುವ ಉದ್ದೇಶಪೂರ್ವಕ ಕೃತ್ಯ ಮಾಡಿದ್ದಾರೆ ಎಂದು ಟೀಕಿಸಿದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರದೇವರು ಮಾತನಾಡಿ, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ನಂತರ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಹತಾಶರಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಿಗುತ್ತದೆಯೇ ಇಲ್ಲವೇ ಎಂಬ ಗೊಂದಲದಲ್ಲಿದ್ದಾರೆ. ಕುರ್ಚಿ ಕಳೆದುಕೊಳ್ಳುವ ಬಿಸಿ ಮುಟ್ಟಲಾರಂಭಿಸಿದೆ. ಹಾಗಾಗಿ, ಅಧಿವೇಶನದ ಸಂದರ್ಭದಲ್ಲಿ ಅನಗತ್ಯವಾಗಿ ಗಲಾಟೆ ಮಾಡಿ, ಕಲಾಪಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ದೂರಿದರು.
ಅಧಿವೇಶನ ನಡೆಯಬಾರದು ಎಂಬ ಬಿಜೆಪಿಗೆ ಕಪ್ಪು ಚುಕ್ಕೆ ತರಲು ಷಡ್ಯಂತ್ರ ಇದರ ಹಿಂದಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಗೆ ಅವಮಾನ ಮಾಡಿದರೆ ನಾವು ಸುಮ್ಮನೆ ಕೂರುವುದಿಲ್ಲ. ಇನ್ನಷ್ಟು ತೀವ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಆರ್.ವಿ.ಸುರೇಶ್, ಶಿವಾನಂದ, ಪದ್ಮನಾಭ, ಚಂದ್ರೇಗೌಡ, ವಿನೋದ್, ಕನಕಪುರ ಮುರಳಿ, ಮಂಜು, ಶಿವಕುಮಾರ್, ಹರೀಶ್, ರಾಘವೇಂದ್ರ, ಅನಿಲ್, ಮಹದೇವಸ್ವಾಮಿ, ನಾಗಮ್ಮ, ಜಯಶೀಲಾ, ಸವಿತಾ, ವರಲಕ್ಷ್ಮಿ ಮತ್ತಿತರರು ಭಾಗವಹಿಸಿದ್ದರು.23ಕೆಆರ್ ಎಂಎನ್ 5.ಜೆಪಿಜಿ
ರಾಮನಗರದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.