ಪಾಕ್ ಪ್ರಜೆಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

| Published : May 07 2025, 12:48 AM IST

ಪಾಕ್ ಪ್ರಜೆಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ನರೇಂದ್ರ ಮೋದಿ ಪಾಕಿಸ್ತಾನ ವಿಚಾರದಲ್ಲಿ ಅತ್ಯಂತ ಕಠಿಣ ನಿರ್ಣಯ ಕೈಗೊಂಡಿದ್ದಾರೆ

ಕಾರವಾರ: ಹಿಂದೂಗಳನ್ನು ಗುರಿಯಾಗಿಸಿ ಪೆಹಲ್ಗಾಮ್ ನಲ್ಲಿ ನಡೆದ ಭೀಕರ ಉಗ್ರದಾಳಿ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಹಾಗೂ ಇತರ ಜಿಲ್ಲೆಗಳಲ್ಲಿ ಅಕ್ರಮವಾಗಿ ವಾಸವಾಗಿರುವ ಪಾಕಿಸ್ತಾನಿ ಪ್ರಜೆಗಳ ಪತ್ತೆ ಹಾಗೂ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ, ನರೇಂದ್ರ ಮೋದಿ ಪಾಕಿಸ್ತಾನ ವಿಚಾರದಲ್ಲಿ ಅತ್ಯಂತ ಕಠಿಣ ನಿರ್ಣಯ ಕೈಗೊಂಡಿದ್ದಾರೆ. ರಾಷ್ಟ್ರೀಯ ಭದ್ರತೆಯ ದೃಷ್ಠಿಯಿಂದ ಕೇಂದ್ರ ಗೃಹ ಸಚಿವಾಲಯ ಪಾಕಿಸ್ತಾನಿ ಪ್ರಜೆಗಳ ಗಡಿಪಾರಿಗೆ ಆಜ್ಞಾಪತ್ರ ಹೊರಡಿಸಿದೆ. ತಕ್ಷಣವೇ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಪಾಕಿಸ್ತಾನಿ ಪ್ರಜೆಗಳನ್ನು ಪತ್ತೆ ಹಚ್ಚಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಹಳಿಯಾಳದ ಮಾಜಿ ಶಾಸಕ ಸುನಿಲ್ ಹೆಗಡೆ, ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಪಾಕಿಸ್ತಾನಿ ಪ್ರಜೆಗಳನ್ನು ಕೂಡಲೇ ಹೊರಹಾಕಬೇಕು. ಪ್ರವಾಸಿಗರನ್ನು ಕೊಲ್ಲುವಾಗ ಉಗ್ರರು ಕೇಳಿದ್ದು ಧರ್ಮವನ್ನು. ಧರ್ಮದ ಆಧಾರದ ಮೇಲೆ ದೇಶ ವಿಭಜನೆ ಆದಾಗಿನಿಂದಲೂ ಪಾಕಿಸ್ತಾನ ನಮ್ಮ ವಿರುದ್ಧ ತೆರೆ ಮರೆಯ ಯುದ್ಧ ಮಾಡುತ್ತಲೇ ಬಂದಿದೆ. ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಾ ಬಂದಿದೆ ಎಂದು ಹೇಳಿದರು.

ಶಿಕ್ಷಣ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ಎಂ.ಜಿ.ಭಟ್, ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಸುನಿಲ್ ಸೋನಿ ಮಾತನಾಡಿ, ಪಾಕ್ ಪ್ರಜೆಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್, ಪ್ರಶಾಂತ ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಗಜಾನನ ಗುನಗಾ, ಸಂಜಯ ಸಾಳುಂಕೆ, ಕಾರವಾರ ನಗರ ಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಮತ್ತಿತರರು ಇದ್ದರು.