ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. | Kannada Prabha
Image Credit: KP
ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲಾ ಒಂದು ಭ್ರಷ್ಟಾಚಾರ ನಡೆಸುತ್ತಲೇ ಇದೆ ಈ ಮೂಲಕ ಎಟಿಎಂ ಸರ್ಕಾರ ಎಂಬುದನ್ನು ಸಾಬೀತು ಮಾಡಿದೆ ಎಂದು ಆರೋಪಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ. ಕಲ್ಮರುಡಪ್ಪ ಮಾತನಾಡಿ, ಪಂಚರಾಜ್ಯ ಚುನಾವಣೆಗೆ ಗುತ್ತಿಗೆದಾರರಿಂದ ಹಣ ಸಂಗ್ರಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಇದೇ ಕಾರಣದಿಂದಲೇ ಗುತ್ತಿಗೆದಾರರ ಬಾಕಿ ಪಾವತಿ ಮಾಡುವ ಕೆಲಸವಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ಸಿನ ಮುಖಂಡರಾದ ಗುತ್ತಿಗೆದಾರರ ಮನೆಯಲ್ಲಿ ಸಿಕ್ಕ ಹಣ ಬಿಜೆಪಿ ಅವರಿಗೆ ಸೇರಿದ್ದು ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಮರ್ಪಕ ತನಿಖೆ ನಡೆಯಲಿ. ಬಿಜೆಪಿಯವರೇ ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಈ ರೀತಿ ಸುಳ್ಳು ಹೇಳುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಅಧಿಕಾರದಲ್ಲಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ಸಿನವರು ಸುಳ್ಳು ಆರೋಪ ಮಾಡುತ್ತಿದ್ದರು. ಆದರೆ ಇಂದು ನಾವು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಆರೋಪ ಮಾಡಿದಾಗ ನೀವೇನು ಬಂದು ನೋಡಿದ್ದೀರಾ ಎಂದು ಪ್ರಶ್ನಿಸುತ್ತಿದ್ದಾರೆ. ಅಂದು ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಪಡೆದಿದ್ದನ್ನು ಕಾಂಗ್ರೆಸ್ ನವರು ಬಂದ ನೋಡಿದ್ದಾರಾ ಎಂದು ಪ್ರಶ್ನಿಸಿದ ಅವರು, ಸುಳ್ಳು ಆರೋಪ ಮಾಡುವುದನ್ನು ಕಾಂಗ್ರೆಸ್ ಮೊದಲು ಬಿಡಬೇಕು ಎಂದು ಆಗ್ರಹಿಸಿದರು ಗುತ್ತಿಗೆದಾರರ ಮನೆಯಲ್ಲಿ ಹಣ ಪತ್ತೆಯಾದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯದ ತನಿಖಾ ಸಂಸ್ಥೆಗಳು ಕಾಂಗ್ರೆಸ್ ನ ಕೈ ಗೊಂಬೆಯಾಗದೆ ಸರಿಯಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಟಿ. ರಾಜಶೇಖರ್, ಚಿಕ್ಕಮಗಳೂರು ನಗರ ಘಟಕ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್, ರವೀಂದ್ರ ಬೆಳವಾಡಿ, ಕೋಟೆ ರಂಗನಾಥ್, ಕವಿತಾ ಶೇಖರ್, ಜಸಂತಾ ಅನಿಲ್‌ಕುಮಾರ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. 16 ಕೆಸಿಕೆಎಂ 6 ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.