ಸಾರಾಂಶ
ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿದರು. ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಹೈಕೋರ್ಟ್ ತಡೆ ನೀಡಲು ನಿರಾಕರಿಸಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿದರು.ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಿಟಿ ಜಿಟಿ ಮಳೆಯ ನಡುವೆಯೂ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಅಂದೇ ರಾಜಿನಾಮೆ ನೀಡಬೇಕಿತ್ತು, ಕಾನೂನಿಗೆ ಬೆಲೆ ಕೊಡದೆ ಸಂವಿಧಾನ ವಿರೋಧಿ ನಡೆ ಅನುಸರಿಸಿ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುತ್ತಿದ್ದಾರೆ.ಮುಖ್ಯಮಂತ್ರಿ ಅವರ ಮೇಲ್ಮನವಿ ಅರ್ಜಿ ವಜಾ ಮಾಡಿ ಹೈಕೋರ್ಟ್ ನೀಡಿರುವ ತೀರ್ಪು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯವಾಗಿದೆ. ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ ಎಂದ ಅವರು ಸಿದ್ದರಾಮಯ್ಯ ನ್ಯಾಯಾಲಯಕ್ಕೆ ಗೌರವ ನೀಡಿ ತಕ್ಷಣವೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು ಅಲ್ಲಿಯವರೆಗೂ ಬಿಜೆಪಿಯ ಹೋರಾಟ ನಿರಂತರವಾಗಲಿದೆ ಎಂದರು
ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಅನಿತಾ ಪೂವಯ್ಯ, ಯಮುನಾ ಚಂಗಪ್ಪ, ತಳೂರು ಕಿಶೋರ್ ಕುಮಾರ್, ಕನ್ನಂಡ ಸಂಪತ್, ಕವನ್ ಕಾರ್ಯಪ್ಪ, ಮಹೇಶ್ ಜೈನಿ, ಮನು ಮಂಜುನಾಥ್, ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.