ಕಾಂಗ್ರೆಸ್ಸಿಗರ ವಿರುದ್ಧ ಕ್ರಮಕ್ಕಾಗಿ ಬಿಜೆಪಿ ಪ್ರತಿಭಟನೆ

| Published : Aug 23 2024, 01:19 AM IST

ಕಾಂಗ್ರೆಸ್ಸಿಗರ ವಿರುದ್ಧ ಕ್ರಮಕ್ಕಾಗಿ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗುರುವಾರ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗುರುವಾರ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಅವರ ಬೆಂಬಲಿಗರು ರಾಜ್ಯಪಾಲರ ವಿರುದ್ಧ ಅತ್ಯಂತ ಅವಹೇಳನಕಾರಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಅವರನ್ನು ವೈಯುಕ್ತಿಕವಾಗಿ ತೇಜೋವಧೆ ಮಾಡಲು ಹೊರಟಿದ್ದಾರೆ. ಈಗಾಗಲೇ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದಾರೆ ಎಂದು ಗೊತ್ತಾಗಿದೆ. ಅಲ್ಲದೇ ರಾಜ್ಯಪಾಲರು ಕೂಡ ತನಿಖೆಗೆ ಒಪ್ಪಿಗೆ ನೀಡಿದ್ದಾರೆ. ಈಗಿದ್ದರೂ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಮೇಲೆ ಮುಗಿಬಿದ್ದಿರುವುದು ಶೋಷಿತ ಸಮುದಾಯದ ವಿರೋಧಿ ಪ್ರವೃತ್ತಿಗೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯಪಾಲರ ವಿರುದ್ಧ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಜಾತಿನಿಂದನೆ ಕೇಸ್‌ಗಳನ್ನು ದಾಖಲಿಸಬೇಕಾಗಿದೆ. ಪರಿಶಿಷ್ಟ ಜನಾಂಗಕ್ಕೆ ಸೇರಬೇಕಾಗಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರು ಕೂಡ ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣದಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯಪಾಲರೇ ಹೊಣೆ ಎಂದು ಹೇಳಿಕೆ ನೀಡಿರುವ ಮತ್ತು ಬಾಂಗ್ಲಾದ ಸ್ಥಿತಿ ಕರ್ನಾಟಕಕ್ಕೂ ಬರುತ್ತದೆ ಎಂದಿರುವ ಐವನ್ ಡಿಸೋಜ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವ ಜಮೀರ್ ಅಹಮ್ಮದ್, ಕೃಷ್ಣೇ ಬೈರೇಗೌಡ, ದಿನೇಶ್ ಗುಂಡುರಾವ್, ನಂಜೇಗೌಡ ಅವರ ವಿರುದ್ಧ ಜಾತಿ ನಿಂದನೆ ಹಾಗೂ ಗುಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನ ಪರಿಷತ್‌ ಸದಸ್ಯ ಧನಂಜಯ ಸರ್ಜಿ, ಮಾಜಿ ಶಾಸಕ ಅಶೋಕ್ ನಾಯ್ಕ್, ಸುರೇಖಾ ಮುರಳೀಧರ್, ಜಗದೀಶ್, ಎಸ್.ದತ್ತಾತ್ರಿ, ನಾಗರಾಜ್, ಐಡಿಯಲ್ ಗೋಪಿ, ಶಿವಾನಂದ್, ಜ್ಞಾನೇಶ್ವರ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಗಾಯಿತ್ರಿಮಲ್ಲಪ್ಪ, ಸುಮಲತಾ, ರಶ್ಮಿ ಮತ್ತು ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನಕ್ಕೆ ವಿರುದ್ಧವಾಗಿ ನಡೆದು ಕೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ ಅಂತಾದರೆ. ಅವರು ತಪ್ಪೇ ಮಾಡಿಲ್ಲ ಎಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿ, ತನಿಖೆ ಎದುರಿಸಲಿ.

ಎಸ್.ಎನ್ ಚನ್ನಬಸಪ್ಪ, ಶಾಸಕ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 2ಜಿ ಸ್ಪೆಕ್ಟ್ರಮ್ ಹಗರಣ, ಬಿಎಸ್‌ಎನ್‌ಎಲ್ ಸೇರಿದಂತೆ ಸಾಕಷ್ಟು ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದೆ. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ಪಕ್ಷದವರಿಗೆ ಸರ್ಕಾರ ನಡೆಸುವ ಯಾವುದೇ ನೈತಿಕತೆ ಇಲ್ಲ.

ಬಿ.ವೈ ರಾಘವೇಂದ್ರ, ಸಂಸದ,