ಬೆಳಗಾವಿ ದಲಿತ ಮಹಿಳೆಯ ಮೇಲಿನ ದೌರ್ಜನ್ಯ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

| Published : Dec 17 2023, 01:45 AM IST

ಬೆಳಗಾವಿ ದಲಿತ ಮಹಿಳೆಯ ಮೇಲಿನ ದೌರ್ಜನ್ಯ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಬೆಳಗಾವಿಯಲ್ಲಿ ದಲಿತ ಮಹಿಳೆಯ ಮೇಲಿನ ದೌರ್ಜನ್ಯ ಮತ್ತು ನಗ್ನ ಮೆರವಣಿಗೆ ಪ್ರಕರಣ ಖಂಡಿಸಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಕರ್ನಾಟಕ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಮಡಿಕೇರಿಯಲ್ಲಿ ಕೊಡಗು ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭ ಮಾತನಾಡಿದ ಕೊಡಗು ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ಆರೇ ತಿಂಗಳಲ್ಲಿ ವೈಫಲ್ಯತೆಯನ್ನು ಕಂಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಕ್ಷೇತ್ರದಲ್ಲೇ ಈ ಘಟನೆ ನಡೆದಿದೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲೇ ಘಟನೆ ನಡೆದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತ್ರಸ್ತೆಯನ್ನು ಭೇಟಿ ಮಾಡಿಲ್ಲ. ಹೈಕೋರ್ಟ್‌ ನಿರ್ದೇಶನ ನೀಡಿದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ ಮಹಿಳೆಯರಿಗೆ, ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ ಈ ಕಾರಣಕ್ಕೆ ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ಆಡಳಿತವನ್ನು ಬಿಟ್ಟು ತೊಲಗಿ ಎಂದು ಹೇಳಿದರು.ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಇಲಾಖೆಯ ಮೇಲೆ ಹಿಡಿತ ಇಲ್ಲ. ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಅವರು, ರಾಜ್ಯದಲ್ಲಿ ಇತ್ತೀಚೆಗೆ ಹೆಣ್ಣು ಭ್ರೂಣ ಹತ್ಯೆಯು ಹೆಚ್ಚಾಗಿದ್ದು, ಅದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇವತ್ತು ಸಮಾಜಕ್ಕೆ ಮಾದರಿಯಾಗಿ, ಪೂರಕವಾಗಿ ಇರಬೇಕಿದ್ದ ವೈದ್ಯರುಗಳೇ ಹೆಣ್ಣು ಭ್ರೂಣ ಹತ್ಯೆಯಲ್ಲಿ ಭಾಗಿಯಾಗಿರುವುದನ್ನು ಕಾಣುತ್ತಿದ್ದೇವೆ. ಇದನ್ನು ಕಂಟ್ರೋಲ್ ಮಾಡಲು ಇಂದಿನ ಸರ್ಕಾರ ವಿಫಲವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.ಮತ್ತೊಂದೆಡೆ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ಕಾಂಗ್ರೆಸ್ ಸಚಿವ ಶಾಸಕರು ಒತ್ತಾಯಿಸುತ್ತಿರುವುದಕ್ಕೂ ವಿರೋಧ ವ್ಯಕ್ತ ಪಡಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಶಾಸಕರು, ಸಚಿವರು ತಮ್ಮ ಮನೆಗೆ ಟಿಪ್ಪು ಹೆಸರಿಟ್ಟುಕೊಳ್ಳಲಿ ಎಂದು ಆಕ್ರೋಶ ಹೊರಹಾಕಿದರು.ಪ್ರತಿಭಟನೆಯಲ್ಲಿ ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯರಾದ ಮಹೇಶ್ ಜೈನಿ, ಅರುಣ್ ಶೆಟ್ಟಿ, ಪಕ್ಷದ ಪ್ರಮುಖರಾದ ಜಗದೀಶ್, ನಾಗೇಶ್, ಬಾಲಕೃಷ್ಣ, ಅರುಣ್ ಕುಮಾರ್, ಚಂದ್ರು ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.