ತೈಲ ಬೆಲೆ ಇಳಿಕೆ ಒತ್ತಾಯಿಸಿ ಇಂದು ಬಿಜೆಪಿ ಪ್ರತಿಭಟನೆ

| Published : Jun 20 2024, 01:12 AM IST

ತೈಲ ಬೆಲೆ ಇಳಿಕೆ ಒತ್ತಾಯಿಸಿ ಇಂದು ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರ ತಕ್ಷಣ ಇಳಿಕೆ ಮಾಡಬೇಕು. ಸಾಧ್ಯವಾಗದಿದ್ದಲ್ಲಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿ ಬಿಜೆಪಿ 2ನೇ ಹಂತದ ಹೋರಾಟಕ್ಕೆ ಇಳಿದಿದೆ. ಗುರುವಾರ ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜನಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರ ತಕ್ಷಣ ಇಳಿಕೆ ಮಾಡಬೇಕು. ಸಾಧ್ಯವಾಗದಿದ್ದಲ್ಲಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿ ಬಿಜೆಪಿ 2ನೇ ಹಂತದ ಹೋರಾಟಕ್ಕೆ ಇಳಿದಿದೆ. ಈ ಪ್ರಯುಕ್ತ ಗುರುವಾರ ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ಜನಪರವಾಗಿ ಇತ್ತೀಚೆಗೆ ರಾಜ್ಯವ್ಯಾಪಿ ತೀವ್ರ ಹೋರಾಟ ನಡೆಸಲಾಗಿದೆ. ಆದರೆ ಸರ್ಕಾರ ಇದಕ್ಕೆ ಸ್ಪಂದನೆ ನೀಡದೆ ನಿರ್ಲಕ್ಷ್ಯ ತೋರಿದೆ. ಎರಡನೇ ಹಂತದ ಪ್ರತಿಭಟನೆಗೂ ಸ್ಪಂದನೆ ದೊರೆಯದಿದ್ದಲ್ಲಿ ಗ್ರಾಮ ಮಟ್ಟದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕುವಲ್ಲಿ ವರೆಗೆ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಜನಪರ ಕಾಳಜಿಯಿಂದ ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಗುರುವಾರ ನಡೆಸುತ್ತಿರುವ ಪ್ರತಿಭಟನೆಗೆ ಸಾರ್ವಜನಿಕರು, ಆಟೋ, ಟ್ಯಾಕ್ಸಿ ಮತ್ತಿತರ ವಾಹನ ಚಾಲಕರು ಕೂಡ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

ಗುರುವಾರ 10.30 ಗಂಟೆಗೆ ವಿರಾಜಪೇಟೆ ಬಿಜೆಪಿ ಕಚೇರಿಯಿಂದ ಮೆರವಣಿಗೆ ಮೂಲಕ ತೆರಳಿ ಪಟ್ಟಣದ ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲಾಗುವುದು. ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕೇಂದರು.

ಸೋಮವಾರಪೇಟೆ ಮಂಡಲದ ಅಧ್ಯಕ್ಷ ಗೌತಮ್ ಗೌಡ ಮಾತನಾಡಿ, ಬೆಳಗ್ಗೆ 10.30ಕ್ಕೆ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಪುಟ್ಟಪ್ಪ ವೃತ್ತಕ್ಕೆ ತೆರಳಿ ಮೂರು ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಿರುವುದಾಗಿ ತಿಳಿಸಿದರು.ಬಿಜೆಪಿ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ರು.2 ಸಾವಿರ ನೀಡಿದಂತೆ ಮಾಡಿ ತೆರಿಗೆ ಹೊರೆ ಮತ್ತು ಬೆಲೆ ಏರಿಕೆ ಮೂಲಕ ಮತ್ತೆ ಕಸಿದುಕೊಳ್ಳುತ್ತಿದೆ ಎಂದು ಟೀಕಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಮಡಿಕೇರಿ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ ಸುದ್ದಿಗೋಷ್ಠಿಯಲ್ಲಿದ್ದರು.