ಬಿಜೆಪಿ: ಶೆಟ್ಟರ್‌, ಸುಧಾಕರ್‌, ಕಾಗೇರಿಗೆ ಟಿಕೆಟ್‌

| Published : Mar 25 2024, 12:49 AM IST / Updated: Mar 25 2024, 07:55 AM IST

ಸಾರಾಂಶ

3 ಹಾಲಿ ಸಂಸದರಿಗೆ ಕೊಕ್‌ ನೀಡಿ ಕರ್ನಾಟಕದಲ್ಲಿ ಚಿತ್ರದುರ್ಗ ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ. ಅನಂತ್‌ ಹೆಗಡೆ, ಬಚ್ಚೇಗೌಡ, ಮಂಗಳಾ ಅಂಗಡಿಗೆ ಕೊಕ್‌ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು 

ಲೋಕಸಭಾ ಚುನಾವಣೆಗೆ ಬಿಡುಗಡೆಯಾದ ಬಿಜೆಪಿಯ ಐದನೇ ಪಟ್ಟಿಯಲ್ಲಿ ರಾಜ್ಯದ ಹಾಲಿ ಮೂವರು ಸಂಸದರಿಗೆ ಟಿಕೆಟ್‌ ಕೈತಪ್ಪಿದ್ದು, ರಾಯಚೂರು ಕ್ಷೇತ್ರದಲ್ಲಿ ಮಾತ್ರ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್‌ ಅವರಿಗೆ ಮಣೆ ಹಾಕಲಾಗಿದೆ.

ಬೆಳಗಾವಿ, ಉತ್ತರ ಕನ್ನಡ, ರಾಯಚೂರು ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಭಾನುವಾರ ಪ್ರಕಟಿಸಲಾಗಿದೆ. ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಘೋಷಣೆ ಬಾಕಿ ಉಳಿಸಿಕೊಳ್ಳಲಾಗಿದೆ. 

ಬೆಳಗಾವಿ ಕ್ಷೇತ್ರದ ಹಾಲಿ ಸಂಸದೆ ಮಂಗಳಾ ಅಂಗಡಿ ಬದಲಿಗೆ ಅವರ ಸಂಬಂಧಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಟಿಕೆಟ್‌ ನೀಡಲಾಗಿದೆ. ಉತ್ತರ ಕನ್ನಡದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಬದಲು ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. 

ಚಿಕ್ಕಬಳ್ಳಾಪುರದಲ್ಲಿ ಸಂಸದ ಬಿ.ಎನ್‌.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ, ಆ ಕ್ಷೇತ್ರಕ್ಕೆ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. 

ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ಗೆ ಹೋಗಿ ಮತ್ತೆ ಬಿಜೆಪಿಗೆ ಮರಳಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಬೆಳಗಾವಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. 

ಜಗದೀಶ್‌ ಶೆಟ್ಟರ್‌ ಧಾರವಾಡ ಅಥವಾ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದರು. ಆದರೆ, ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್‌ ನೀಡಲಾಗಿದೆ. 

ಅಲ್ಲದೇ, ಧಾರವಾಡ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಲು ಜಗದೀಶ್‌ ಶೆಟ್ಟರ್‌ಗೆ ಟಿಕೆಟ್‌ ನೀಡಲಾಗಿದೆ. 

ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಸಂಸದ ಅಮರೇಶ್ವರ್ ನಾಯಕ್‌ ಮತ್ತು ಬಿ.ವಿ.ನಾಯಕ್‌ ನಡುವೆ ಪೈಪೋಟಿ ಇತ್ತು. ಹಾಲಿ ಸಂಸದರಿಗೆ ಟಿಕೆಟ್‌ ನೀಡುವ ಸಾಧ್ಯತೆ ಕಡಿಮೆ ಎಂಬ ಚರ್ಚೆಗಳು ನಡೆದಿದ್ದವು. ಆದರೆ, ಅಂತಿಮವಾಗಿ ಅಮರೇಶ್ವರ್‌ ನಾಯಕ್‌ ಅವರಿಗೇ ಟಿಕೆಟ್‌ ಘೋಷಣೆ ಮಾಡಲಾಗಿದೆ. 

ಇನ್ನು, ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತಕುಮಾರ್‌ ಹೆಗಡೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದ ಹಿನ್ನೆಲೆಯಲ್ಲಿ ಪಕ್ಷದಲ್ಲಿಯೇ ಮತ್ತೊಮ್ಮೆ ಟಿಕೆಟ್‌ ನೀಡಲು ವಿರೋಧ ಇತ್ತು. 

ಈ ಹಿನ್ನೆಲೆಯಲ್ಲಿ ಟಿಕೆಟ್‌ ಕೈತಪ್ಪಿದ್ದು, ಚಕ್ರವರ್ತಿ ಸೂಲಿಬೆಲೆ ಮತ್ತು ಹರಿಪ್ರಕಾಶ್ ಕೋಣೆಮನೆ ನಡುವೆ ಪೈಪೋಟಿ ಏರ್ಪಟ್ಟಿತ್ತು. ಆದರೆ, ಬಿಜೆಪಿ ಹೈಕಮಾಡ್‌ ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಂತಿಮವಾಗಿ ಟಿಕೆಟ್‌ ಘೋಷಣೆ ಮಾಡಿದೆ.

ಚಿತ್ರದುರ್ಗ ಕ್ಷೇತ್ರ ಮಾತ್ರ ಬಾಕಿ ಲೋಕಸಭಾ ಚುನಾವಣೆಗೆ ಜೆಡಿಎಸ್‌ ಜತೆ ಮೈತ್ರಿಯೊಂದಿಗೆ ಕಣಕ್ಕಿಳಿಯುತ್ತಿರುವ ಬಿಜೆಪಿ 24 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಚಿತ್ರದುರ್ಗ ಕ್ಷೇತ್ರ ಮಾತ್ರ ಬಾಕಿ ಉಳಿಸಿಕೊಂಡಿದೆ. 

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಕ್ಷೇತ್ರದಿಂದ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದು, ಅವರ ಮನವೊಲಿಕೆಗೆ ಬಿಜೆಪಿ ವರಿಷ್ಠರು ಪ್ರಯತ್ನ ಮುಂದುವರೆಸಿದ್ದಾರೆ. 

ಹೀಗಾಗಿ ಆ ಕ್ಷೇತ್ರವನ್ನು ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಒಂದು ವೇಳೆ ನಾರಾಯಣಸ್ವಾಮಿ ಅವರಿಗೆ ಟಿಕೆಟ್‌ ನೀಡದಿದ್ದರೆ ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ನೀಡುವ ಸಾಧ್ಯತೆ ಇದೆ. ಈ ನಡುವೆ ಶಾಸಕ ಚಂದ್ರಪ್ಪ ಪುತ್ರ ಎಂ.ಸಿ.ರಘುನಂದನ್‌ ಸಹ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ.

ಯಾರು ಎಲ್ಲಿಂದ ಸ್ಪರ್ಧೆ? 
ಬೆಳಗಾವಿ - ಜಗದೀಶ್‌ ಶೆಟ್ಟರ್
ಚಿಕ್ಕಬಳ್ಳಾಪುರ - ಡಾ.ಕೆ.ಸುಧಾಕರ್‌
ಉತ್ತರ ಕನ್ನಡ - ವಿಶ್ವೇಶ್ವರ ಹೆಗಡೆ ಕಾಗೇರಿ
ರಾಯಚೂರು - ರಾಜಾ ಅಮರೇಶ್ವರ ನಾಯಕ್‌

ಅನಂತ ಕುಮಾರ್ ಹೆಗಡೆಗೆ ಮಿಸ್‌
ಬೆಂಗಳೂರು: ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ವಿಜೇತರಾಗಿದ್ದ ಅನಂತ ಹೆಗಡೆ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ಕೈತಪ್ಪಿದೆ. ಕಾಗೇರಿ ಅವರಿಗೆ ಹೈಕಮಾಂಡ್‌ ಮಣೆ ಹಾಕಿದೆ.