ಸಿದ್ದು ತಲೆದಂಡಕ್ಕೆ ಬಿಜೆಪಿಗರ ಒತ್ತಡ

| Published : Sep 25 2024, 12:50 AM IST

ಸಾರಾಂಶ

ಮುಡಾ ಹಗರಣ ಸಂಬಂಧ ಹೈಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪಟ್ಟು ಹಿಡಿದಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮುಡಾ ಹಗರಣ ಸಂಬಂಧ ಹೈಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪಟ್ಟು ಹಿಡಿದಿದೆ.

ಮಂಗಳವಾರ ತೀರ್ಪು ಹೊರಬೀಳುತ್ತಿದ್ದಂತೆಯೇ ಹಲವೆಡೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕರು ತಕ್ಷಣವೇ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುವಂತೆ ಸೂಚನೆಯನ್ನೂ ರವಾನಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹೈಕೋರ್ಟ್‌ ನೀಡಿರುವ ತೀರ್ಪು ಪ್ರತಿಪಕ್ಷಗಳು ನಡೆಸಿದ ಬೆಂಗಳೂರು-ಮೈಸೂರು ಪಾದಯಾತ್ರೆಗೆ ಸಂದ ಮೊದಲ ಹಂತದ ಜಯ. ಈ ತೀರ್ಪನ್ನು ಗೌರವಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಲವಾಗಿ ಆಗ್ರಹಿಸಿದರು.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವುದು ಸ್ವಾಗತಾರ್ಹ. ಕಪ್ಪುಚುಕ್ಕೆ ಇಲ್ಲವೆಂದು ಎದೆ ತಟ್ಟಿಕೊಳ್ಳುವ ಸಿದ್ದರಾಮಯ್ಯ ನೈತಿಕತೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇಷ್ಟೆಲ್ಲ ಆದ ನಂತರವೂ ರಾಜೀನಾಮೆ ನೀಡದೆ ಕುರ್ಚಿಗೆ ಅಂಟಿಕೊಂಡು ಕುಳಿತರೆ ಅದು ಅವರೇ ಹೇಳಿಕೊಳ್ಳುವ 40 ವರ್ಷಗಳ ರಾಜಕೀಯ ಬದುಕಿಗೆ ಹಾಗೂ ರಾಜ್ಯದ ಜನರಿಗೆ ಮಾಡುವ ಅಪಮಾನವಾಗುತ್ತದೆ ಎಂದು ಕಿಡಿಕಾರಿದರು.

ಹಿಂದಿನ ಅವಧಿಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್‌ ಹಾಗೂ ಸಂತೋಷ್‌ ಲಾಡ್‌ ವಿರುದ್ಧ ಆರೋಪ ಕೇಳಿಬಂದಾಗ ಕೂಡಲೇ ರಾಜೀನಾಮೆ ಪಡೆಯಲಾಗಿತ್ತು. ಈ ಅವಧಿಯಲ್ಲಿ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಅವರಿಗೆ ಒಂದು ಕಾನೂನು, ಸಿದ್ದರಾಮಯ್ಯಗೆ ಒಂದು ಕಾನೂನಾ? ಕಾನೂನು ಹಾಗೂ ನೈತಿಕತೆ ಎಲ್ಲರಿಗೂ ಒಂದೇ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದರು.

ಬೆಂಗಳೂರಿನಲ್ಲಿ ಪಕ್ಷದ ಕೇಂದ್ರ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮುಖಂಡರಾದ ಸಿ.ಟಿ.ರವಿ, ಎನ್‌.ರವಿಕುಮಾರ್ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಸೇರಿ ರಾಜಿನಾಮೆ ನೀಡುವಂತೆ ಘೋಷಣೆ ಕೂಗಿದರು.

ರವಿಕುಮಾರ್ ಮಾತನಾಡಿ, ಸಿದ್ದರಾಮಯ್ಯನವರು ಸಂವಿಧಾನ, ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗಕ್ಕೆ ಗೌರವ ಕೊಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಒಂದು ವೇಳೆ ರಾಜೀನಾಮೆ ಕೊಡದಿದ್ದರೆ ಅದು ಪ್ರಜಾಪ್ರಭುತ್ವ, ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಮಾಡುವ ಅವಮಾನ ಎಂದು ಹೇಳಿದರು.