ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿವೆ. ಹಾಲು, ಪೆಟ್ರೋಲ್, ಡೀಸೆಲ್, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ.
ಹುಬ್ಬಳ್ಳಿ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.ಘಂಟಿಕೇರಿ ಪೊಲೀಸ್ ಠಾಣೆ ಬಳಿಯ ಸರಾಫಗಟ್ಟಿ ವೃತ್ತದಿಂದ ತಹಸೀಲ್ದಾರ್ ಕಚೇರಿ ವರೆಗೆ ಮುಖ್ಯಮಂತ್ರಿ ಅವರ ಅಣಕು ಶವಯಾತ್ರೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ತಹಸೀಲ್ದಾರ್ ಕಚೇರಿ ಎದುರು ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ವಿಪ ಸದಸ್ಯ ಪ್ರದೀಪ ಶೆಟ್ಟರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿವೆ. ಹಾಲು, ಪೆಟ್ರೋಲ್, ಡೀಸೆಲ್, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಬಡವರು ಮತ್ತು ರೈತರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ. 2028ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.ವಿಪ ಸದಸ್ಯ ಲಿಂಗರಾಜ ಪಾಟೀಲ ಮಾತನಾಡಿ, ಭೀಕರ ಬರಗಾಲದ ಮುನ್ಸೂಚನೆ ಇದ್ದರೂ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಿಲ್ಲ. ಬೆಳೆಹಾನಿಗೊಳಗಾದ ರೈತರಿಗೆ ಸಮರ್ಪಕ ಪರಿಹಾರ ನೀಡಿಲ್ಲ. ಬಿಜೆಪಿ ಹೋರಾಟದ ಬಳಿಕ ₹5 ಸಾವಿರ ಪರಿಹಾರ ಘೋಷಿಸಿದರೂ ರೈತರ ಖಾತೆಗೆ ಹಣ ಜಮೆಯಾಗಿಲ್ಲ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಪಾಲಿಕೆ ಸಭಾ ನಾಯಕ ಶಿವು ಮೆಣಸಿನಕಾಯಿ, ಜಯತೀರ್ಥ ಕಟ್ಟಿ, ಮಂಜುನಾಥ ಕಾಟ್ಕರ್, ಸೀಮಾ ಲದವಾ, ವೆಂಕಟೇಶ ಕಾಟವೆ, ನಾರಾಯಣ ಜರತಾರಘರ್, ಶಾಂತಾ ಹಿರೇಮಠ, ಪ್ರೀತಿ ಖೋಡೆ, ರಾಧಾಬಾಯಿ ಸಫಾರೆ, ಪೂಜಾ ಶೇಜವಾಡಕರ, ರಾಜು ಕೊರ್ಯಾಣಮಠ, ಲಕ್ಷ್ಮೀಕಾಂತ ಘೋಡಕೆ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.