ಸಾರಾಂಶ
ಮಂಗಳೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ನಡೆಯಲಿರುವ ಧರಣಿಯಲ್ಲಿ ಬಿಜೆಪಿ ನಾಯಕರು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ. 16ರಂದು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.ಮಂಗಳೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ನಡೆಯಲಿರುವ ಧರಣಿಯಲ್ಲಿ ಬಿಜೆಪಿ ನಾಯಕರು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಕೆಂಪು ಕಲ್ಲು ಗಣಿಗಾರಿಕೆಗೆ ಇಲ್ಲ-ಸಲ್ಲದ ನಿರ್ಬಂಧ ಹೇರಿರುವ ಪರಿಣಾಮ ಅದನ್ನು ಅವಲಂಬಿಸಿಕೊಂಡಿರುವ ಕಾರ್ಮಿಕರು ಹಾಗೂ ಕಲ್ಲು ಸಾಗಾಟ ಮಾಡುವ ವಾಹನ ಮಾಲೀಕರು ಕೂಡ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಿರುವಾಗ ಸರ್ಕಾರದ ಈ ರೀತಿಯ ಜನವಿರೋಧಿ ನಿರ್ಧಾರಗಳಿಂದ ಬಾಧಿತರಾಗಿರುವವರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕ್ಯಾ. ಚೌಟ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.