ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದ್ದು, ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಜಿಲ್ಲೆಯ ಬಿಜೆಪಿ ಮುಖಂಡರು, ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸುವರು.
ಕನ್ನಡಪ್ರಭ ವಾರ್ತೆ ಮಂಡ್ಯ
ಕಾಂಗ್ರೆಸ್ ಹಾಗೂ ಕಾಕ್ರೋಚ್ ಪಕ್ಷದ ವಿರುದ್ಧ ಪ್ರಜಾಪ್ರಭುತ್ವದ ಉಳಿವಿಗಾಗಿ ನ.೬ರಂದು ಬಿಜೆಪಿ ವತಿಯಿಂದ ಮೈಸೂರಿನಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ತಿಳಿಸಿದರು.ಬಿಜೆಪಿ ವಿಕಾಸ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರಿನಲ್ಲಿ ಸುಮಾರು ೩ ಕಿ.ಮೀ. ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ೧೦ ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ನಡೆಸಲಾಗುತ್ತಿದೆ. ಮೈಸೂರಿನ ಟೌನ್ ಹಾಲ್ನ ಗ್ರೌಂಡ್ನಿಂದ ಪಾದಯಾತ್ರೆ ಆರಂಭಗೊಳ್ಳಲಿದೆ ಎಂದು ತಿಳಿಸಿದರು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದ್ದು, ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಜಿಲ್ಲೆಯ ಬಿಜೆಪಿ ಮುಖಂಡರು, ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸುವರು ಎಂದು ಹೇಳಿದರು.
ಕಾಂಗ್ರೆಸ್ ಹಾಗೂ ಕಾಕ್ರೋಚ್ ಪಕ್ಷದವರು ದೇಶದಲ್ಲಿ ಅರಾಜಕತೆ ಸೃಷ್ಠಿ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ ನಡೆಸಿತ್ತು. ಇದಕ್ಕೆ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡುವ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಠಿಸಲು ಮುಂದಾಗಿದೆ. ಇಂತಹ ದೇಶ ವಿರೋಧಿ ಷಡ್ಯಂತ್ರಗಳನ್ನು ದೇಶದ ಜನತೆ ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಸಿಜೆಪಿ ನಾಯಕ ಸೌರವ್ದಾಸ್, ಅಶುತೋಷ್ ರಾಂಕಾ ಅವರು ಶಾಂತಿ ಕಾಪಾಡುವಂತೆ ನೀಡಿದ್ದ ಬಾಂಡ್ನ ನಿಯಮಗಳನ್ನು ಉಲ್ಲಂಘಿಸಿದ್ದರಿಂದಲೇ ಅವರಿಗೆ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ. ಆಯೋಜಕರ ಪೂರ್ವನಿಯೋಜಿತ ಗಲಾಟೆ, ದಂಗೆ, ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮುಂದೆ ಆಗುವ ಅನಾಹುತ ತಪ್ಪಿಸಲು ಮತ್ತು ಪ್ರಾಯೋಜಿತ ಕೃತ್ಯಗಳನ್ನು ತಪ್ಪಿಸಲು, ಸಾರ್ವಜನಿಕ ಆಸ್ತಿ- ಪಾಸ್ತಿ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಕ್ರಮ ಅನುಸರಿಸಲಾಗಿತ್ತು ಎಂದು ದೆಹಲಿ ಹೋರಾಟದ ಬಗ್ಗೆ ವಿವರಿಸಿದರು.ರಾಹುಲ್ಗಾಂಧಿ ಅವರು ಪದೇ ಪದೇ ವಿದೇಶಕ್ಕೆ ತೆರಳಿ ದೇಶದಲ್ಲಿರುವ ಚುನಾಯಿತ ಸರ್ಕಾರವನ್ನು ಪದಚ್ಯುತಗೊಳಿಸುವುದು ಹೇಗೆ, ನರೇಂದ್ರಮೋದಿಯನ್ನು ದೇಶದ ಶತ್ರುವೆಂಬಂತೆ ಬಿಂಬಿಸುವುದು ಹೇಗೆ, ದೇಶದಲ್ಲಿ ದಂಗೆ ಎಬ್ಬಿಸುವುದು, ಚುನಾವಣೆಯಲ್ಲಿ ಅಕ್ರಮಗಳನ್ನು ಎಸಗುವುದು ಹೇಗೆ ಎಂಬುದನ್ನು ಜಾರ್ಜ್ಸೋರಸ್ನಿಂದ ಕೋಚಿಂಗ್ ಪಡೆದುಕೊಂಡು ಬರುತ್ತಿದ್ದಾರೆ ಎಂದು ದೂರಿದರು.
ರಾಹುಲ್ ಗಾಂಧಿ ಅವರು ವೋಟ್ಚೋರಿ ಎಂದು ಸುಳ್ಳು ಅಪಪ್ರಚಾರ ಮಾಡಿ ಸಾಂವಿಧಾನಿಕ ಸಂಸ್ಥೆಗಳಾದ ಚುನಾವಣಾ ಆಯೋಗ, ಸಿಬಿಐ, ತೆರಿಗೆ ಇಲಾಖೆ, ಇಡಿ ನ್ಯಾಯಾಂಗ ವ್ಯವಸ್ಥೆಯನ್ನು ಸಹ ಜನತೆಯ ಮುಂದೆ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟಿದೆ ಎಂದು ಕಿಡಿಕಾರಿದರು.ಎಸ್ಐಆರ್ ಪ್ರಕ್ರಿಯೆ ನಡೆಯುವಾಗ ಎಲ್ಲಾ ಪಕ್ಷದ ವತಿಯಿಂದ ಬಿಎಲ್ಎ - ೨ ಇದ್ದರೂ ಸಹ ಮತದಾರರ ಪಟ್ಟಿಯಿಂದ ಕೈ ಬಿಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು, ನಿಮ್ಮ ಪ್ರತಿನಿಧಿಗಳು ಸಹ ಎಸ್ಐಆರ್ ಸಂದರ್ಭದಲ್ಲಿ ಬಿಎಲ್ಓ ಜೊತೆ ಇರಲಿಲ್ಲವೇ ಎಂದು ಪ್ರಶ್ನಿಸಿದರು. ಆಗ ಅವರಿಗೆ ಮತದಾರರ ಪಟ್ಟಿಯಿಂದ ನೈಜ ಮತದಾರರನ್ನು ಕೈಬಿಡುತ್ತಿರುವ ಮಾಹಿತಿ ತಿಳಿಯಲಿಲ್ಲವೇ ಎಂದು ಗುಡುಗಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಎನ್.ಎಸ್. ಇಂದ್ರೇಶ್, ಮುಖಂಡರಾದ ಯಮದೂರು ಸಿದ್ದರಾಜು, ಎಚ್.ಆರ್. ಅಶೋಕ್ಕುಮಾರ್ ಇತರರು ಗೋಷ್ಠಿಯಲ್ಲಿದ್ದರು.