ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ರದುರ್ಗಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಠಾಚಾರಕ್ಕೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಜೂ.28 ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ತಿಳಿಸಿದರು.
ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ ತನಿಖೆಯನ್ನು ಸಿಬಿಐ ಗೆ ವಹಿಸಬೇಕೆಂದು ರಾಷ್ಟ್ರೀಕೃತ ಬ್ಯಾಂಕ್‍ಗಳು ಹೇಳಿದಾಗ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ನಾಗೇಂದ್ರರವರಿಂದ ರಾಜಿನಾಮೆ ಪಡೆದಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಇದರಲ್ಲಿ ನನ್ನದೇನು ಪಾತ್ರವಿಲ್ಲವೆಂದು ಬಣ್ಣ ಹಚ್ಚುತ್ತಿದ್ದಾರೆ. ಹೈದರಾಬಾದ್‍ನ ಬಾರ್ ಗಳಲ್ಲಿ ಹಣ ಹರಿದಾಡುತ್ತಿದೆ. 700 ನಕಲಿ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಸತ್ಯಾಸತ್ಯತೆಯನ್ನು ಬಯಲಿಗೆಳೆದು ತನಿಖೆ ಚುರುಕುಗೊಳಿಸುವಂತೆ ಒತ್ತಾಯಿಸಿದರು.ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ನೇರ್ಲಗುಂಟೆ ಮಾತನಾಡಿ, ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರು. ಹಗರಣವಾಗಿದೆ. ಪರಿಶಿಷ್ಟರ 25 ಸಾವಿರ ಕೋಟಿ ರು. ದೋಚಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಟ್ಟಿ ಭಾಗ್ಯಗಳಿಗೆ ಬಳಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಯಾರು ಹೊಣೆ? ಎನ್ನುವುದನ್ನು ಪ್ರಶ್ನಿಸುವುದಕ್ಕಾಗಿಯೇ ಮದಕರಿನಾಯಕನ ನೆಲದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.
ಬಿಜೆಪಿ ಮುಖಂಡ ಕುಮಾರಸ್ವಾಮಿ ಮಾತನಾಡಿ, ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರು. ಅವ್ಯವಹಾರವಾಗಿದ್ದು, ನೆರೆಯ ಆಂಧ್ರ ರಾಜ್ಯದ ಚುನಾವಣೆಗೆ ವರ್ಗಾಯಿಸಲಾಗಿದೆ. ಜೂ.28 ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಸಂಬಂಧ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿರವರು ಜಿಲ್ಲೆಯ 6 ತಾಲೂಕುಗಳಲ್ಲಿ ಸಭೆ ನಡೆಸಿ ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅರಿವು ಮೂಡಿಸಿದ್ದಾರೆ ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಜಿ.ಟಿ.ಸುರೇಶ್ ಸಿದ್ದಾಪುರ, ಪಿ.ಸಂಪತ್‍ಕುಮಾರ್, ಎಸ್ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಪಾಲಯ್ಯ, ಯುವ ಮುಖಂಡ ಹುನುಮಂತೇಗೌಡ, ಸೋಮೇಂದ್ರ ಸೇರಿ ಅನೇಕರು ಉಪಸ್ಥಿತರಿದ್ದರು.