ಬಿಜೆಪಿ ವತಿಯಿಂದ ಎರಡು ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾ.ಪಂ.ಗಳ ಎದುರು 23ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವಿವಿಧ ಸಮಸ್ಯೆಗಳ ವಿರುದ್ಧ ಬಿಜೆಪಿ ವತಿಯಿಂದ ಎರಡು ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾ.ಪಂ.ಗಳ ಎದುರು 23ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9/11 ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ರಾಜ್ಯ ಸರ್ಕಾರ ಎರಡು ವರ್ಷಗಳಲ್ಲಿ ಯಾವುದೇ ಆಶ್ರಮ ಮನೆಗಳನ್ನು ಗ್ರಾ.ಪಂ.ಗಳಿಗೆ ಮಂಜೂರು ಮಾಡಿಲ್ಲ. ಅದನ್ನು ಕೂಡಲೇ ನೀಡಬೇಕು. ಅಕ್ರಮ ಸಕ್ರಮ ಅರ್ಜಿಗಳನ್ನು ತಿರಸ್ಕರಿಸದೆ ಸಮಿತಿಯ ಮುಂದೆ ಇರಿಸಿ ತೀರ್ಮಾನ ಮಾಡಬೇಕು ಎಂದ ರಾಜ್ಯ ಸರ್ಕಾರ ವೃದ್ಧಾಪ ವೇತನ ಹಾಗೂ ಸಂಧ್ಯಾ ಸುರಕ್ಷಾ ಮಾಶಾಸನವನ್ನು ಆದಾಯ ಮಿತಿ ಹೆಚ್ಚಳ ಆಗಿರುವ ಕಾರಣಕ್ಕೆ ಕೈಬಿಡಲು ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದೆ. ಕೂಡಲೇ ಈ ಜನ ವಿರೋಧಿ ನಿಲುವನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.ವಿದ್ಯುತ್ ಬೆಲೆ ಏರಿಕೆ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಈ ಐದು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎರಡು ಜಿಲ್ಲೆಗಳಲ್ಲಿ ಒಟ್ಟು 399 ಸ್ಥಳಗಳಲ್ಲಿ ಏಕಾಕಾಲದಲ್ಲಿ ಧರಣಿ ನಡೆಸ ಲಾಗುವುದು ಎಂದು ಅವರು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಶಾಸಕ ಸುರೇಶ್ ಶೆಟ್ಟಿ, ಬಿಜೆಪಿ ಮುಖಂಡರಾದ ರಾಜೇಶ್ ಕಾವೇರಿ, ಉದಯ ಕುಮಾರ್ ಶೆಟ್ಟಿ, ಸುರೇಶ್ ನಾಯಕ್ ಕುಯಿಲಾಡಿ, ಮಟ್ಟಾರು ರತ್ನಾಕರ ಹೆಗ್ಡೆ, ಗೀತಾಂಜಲಿ ಸುವರ್ಣ, ಸಂಧ್ಯಾ ರಮೇಶ್, ದಿನಕರ ಶೆಟ್ಟಿ ಹೆರ್ಗ ಇದ್ದರು.