ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ

| Published : Oct 18 2023, 01:00 AM IST

ಸಾರಾಂಶ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು

ಕನ್ನಡಪ್ರಭ ವಾರ್ತೆ ಹೊಸಪೇಟೆ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಪಟೇಲ್‌ ನಗರದಲ್ಲಿರುವ ಬಿಜೆಪಿ ಕಚೇರಿಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪುನೀತ್‌ ರಾಜ್‌ಕುಮಾರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು. ಬಳಿಕ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರ ಕಾಂಗ್ರೆಸ್‌ನ ಎಟಿಎಂ ಆಗಿದ್ದು, ಹಣ ಸಂಗ್ರಹದ ಕೇಂದ್ರವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್‌ನಿಂದ ಇಡೀ ರಾಜ್ಯವನ್ನು ಉಳಿಸಬೇಕು. ರಾಜ್ಯದ ಭ್ರಷ್ಟ ಸರ್ಕಾರ ತೊಲಗಲಿ, ತೊಲಗಲಿ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಮೊಳಗಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್‌ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರರ ಮನೆಯಲ್ಲಿ ₹42 ಕೋಟಿ ಐಟಿ ದಾಳಿಯಲ್ಲಿ ಸಿಕ್ಕಿದೆ. ಕಾಂಗ್ರೆಸ್‌ ಸರ್ಕಾರಕ್ಕೆ ಕಮಿಷನ್‌ ರೂಪದಲ್ಲಿ ಬಂದ ಹಣ ಎಂಬುದು ಈಗ ದಟ್ಟವಾಗಿ ಸುದ್ದಿಯಾಗಿದೆ. ಪಂಚ ರಾಜ್ಯ ಚುನಾವಣೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಫಂಡಿಂಗ್ ಮಾಡಲು ಈ ಹಣ ಬಳಕೆ ಮಾಡಲಾಗುತ್ತಿತ್ತು. ಕರ್ನಾಟಕವನ್ನು ಕಾಂಗ್ರೆಸ್‌ ತನ್ನ ಎಟಿಎಂ ಆಗಿ ಪರಿವರ್ತನೆ ಮಾಡಿಕೊಂಡಿದೆ. ಐಟಿ ದಾಳಿಯಲ್ಲಿ ಒಂದೊಂದು ಕಡೆ ₹40 ಕೋಟಿ, ₹42 ಕೋಟಿ ಸಿಗುತ್ತಿದೆ ಎಂದರೆ ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ರಾಜ್ಯ ಸರ್ಕಾರ ಕಮಿಷನ್‌ ದಂಧೆ, ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಬರೀ ಸುಳ್ಳು ಗ್ಯಾರಂಟಿ ಭರವಸೆಗಳನ್ನು ನೀಡಿ ಕಾಲಹರಣ ಮಾಡಲಾಗುತ್ತಿದೆ. ಜನಹಿತವನ್ನು ಕಡೆಗಣಿಸಲಾಗಿದೆ. ರಾಜ್ಯ ಸರ್ಕಾರ ಜನರ ಸಮಸ್ಯೆಯತ್ತ ಮುಖ ಮಾಡಬೇಕು. ಬದಲಿಗೆ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಸರಿಯಲ್ಲ. ಐಟಿ ದಾಳಿಯಲ್ಲಿ ಗುತ್ತಿಗೆದಾರರ ಬಳಿ ಕೋಟಿ, ಕೋಟಿ ಹಣ ಸಂಗ್ರಹವಾಗಿರುವುದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ತಹಸೀಲ್ದಾರ್‌ ವಿಶ್ವಜಿತ್‌ ಮೇಹತಾರ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ರವಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್. ರಾಘವೇಂದ್ರ, ಮಂಡಳ ಅಧ್ಯಕ್ಷ ಕಾಸಟ್ಟಿ ಉಮಾಪತಿ, ಹುಡಾ ಮಾಜಿ ಅಧ್ಯಕ್ಷ ಅಶೋಕ್ ಜೀರೆ, ಮುಖಂಡರಾದ ಸಾಲಿಸಿದ್ಧಯ್ಯಸ್ವಾಮಿ, ಶಂಕರ್ ಮೇಟಿ, ಜೀವರತ್ನಂ, ಕಿರಣ್ ಶಂಕ್ರಿ, ರಮೇಶ್ ಗುಪ್ತ, ಬಸವರಾಜ ಕರ್ಕಿಹಳ್ಳಿ, ಹೊನ್ನೂರಪ್ಪ ಮತ್ತಿತರರಿದ್ದರು.