ಸಾರಾಂಶ
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಮತ್ತು ಪಕ್ಷದಲ್ಲಿ ಭದ್ರನೆಲೆ ಕಂಡುಕೊಳ್ಳಲು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಧಾರ ರಹಿತ ಆರೋಪ ಮಾಡಲಾಗುತ್ತಿದೆ. ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.
ಮಡಿಕೇರಿ : ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಮತ್ತು ಪಕ್ಷದಲ್ಲಿ ಭದ್ರನೆಲೆ ಕಂಡುಕೊಳ್ಳಲು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು, ಅವರ ವಿರುದ್ಧ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೈಸೂರು- ಕೊಡಗು ಕ್ಷೇತ್ರದ ಜನತೆಯ ಆಶೀರ್ವಾದದಿಂದ ಸಂಸದರಾಗಿ ಆಯ್ಕೆಯಾಗಿರುವ ಯದುವೀರ್ ಒಡೆಯರ್ ಅವರ ಕಾರ್ಯವೈಖರಿಯ ಕುರಿತು ವಿಶ್ಲೇಶಿಸುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ. ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವುದಕ್ಕೋಸ್ಕರ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಜನರಿಗೆ ತಪ್ಪು ಸಂದೇಶ ರವಾನಿಸಲಾಗುತ್ತಿದೆ. ಅಲ್ಲದೆ ಅತ್ಯಂತ ಗೌರವಯುತ ಸ್ಥಾನದಲ್ಲಿರುವ ಸಂಸದರ ಕುರಿತು ಅಪಪ್ರಚಾರ ಮಾಡಲಾಗುತ್ತಿದ್ದು, ಅಂತವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.ಜಿಲ್ಲೆ ಮಾತ್ರವಲ್ಲದೆ ರಾಜ್ಯದ ಇತರೆಡೆಯೂ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಕುರಿತು ಮತ್ತು ಜನರಿಗೆ ರಕ್ಷಣೆ ನೀಡಬೇಕಾದ ಪೊಲೀಸರಿಗೇ ರಕ್ಷಣೆ ಇಲ್ಲದ ಪರಿಸ್ಥಿತಿ ಉದ್ಭವಿಸಿರುವುದನ್ನು ಸಂಸದರು ಉಲ್ಲೇಖಿಸಿರುವುದೇ ತಪ್ಪು ಎನ್ನುವ ರೀತಿಯಲ್ಲಿ ಮೈನಾ ಅವರು ನೀಡಿರುವ ಹೇಳಿಕೆ ಖಂಡನೀಯ ಎಂದು ಹೇಳಿದ್ದಾರೆ.