ಸಾರಾಂಶ
ಕನ್ನಡಪ್ರಭ ವಾರ್ತೆ ಬಳ್ಳಾರಿ
ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿಯ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಭಾನುವಾರ ಸಂಜೆ ಜಮಾಯಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಮುರಹರಗೌಡ ಗೋನಾಳ್, ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಪೈಕಿ ನಿರೀಕ್ಷೆಯಂತೆಯೇ ಬಿಜೆಪಿ ಮೂರು ಕಡೆ ಜಯಭೇರಿ ಬಾರಿಸಿದೆ. ಈ ಮೂಲಕ ಜನವಿರೋಧಿ ಕಾಂಗ್ರೆಸ್‌ಗೆ ಮತದಾರರು ಸೂಕ್ತ ಪಾಠ ಕಲಿಸಿದ್ದಾರೆ ಎಂದರು.ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣವಿದೆ. ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ. ನರೇಂದ್ರ ಮೋದಿ ಅವರು ಮತ್ತೆ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಸಂದೇಶವನ್ನು ಮೂರು ರಾಜ್ಯಗಳ ಮತದಾರರು ನೀಡಿದ್ದಾರೆ ಎಂದರು.
ಪಕ್ಷದ ಮುಖಂಡ ಗುತ್ತಿಗನೂರು ವಿರುಪಾಕ್ಷಗೌಡ ಹಾಗೂ ಗಣಪಾಲ್ ಐನಾಥ ರೆಡ್ಡಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಇಡೀ ದೇಶವೇ ಮೆಚ್ಚಿದೆ ಎಂಬುದಕ್ಕೆ ಮೂರು ರಾಜ್ಯಗಳ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ. ನರೇಂದ್ರ ಮೋದಿ ಅವರಿಂದ ಮಾತ್ರ ದೇಶಕ್ಕೆ ಸುಭದ್ರ ಆಡಳಿತ ನೀಡಲು ಸಾಧ್ಯ ಎಂದು ಜನರು ತೀರ್ಮಾನಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಮಲ ಅರಳಲಿದೆ. ಮತ್ತೆ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಪಕ್ಷದ ಮುಖಂಡರಾದ ಮೋತ್ಕರ್ ಶ್ರೀನಿವಾಸ್, ಡಾ. ಮಹಿಪಾಲ್, ವೀರಶೇಖರರೆಡ್ಡಿ, ಮಲ್ಲನಗೌಡ, ಶಿವಶಂಕರ ರೆಡ್ಡಿ ಎಚ್. ವೀರಾಪುರ, ಬಿಜೆಪಿ ನಗರ ಘಟಕ ಅಧ್ಯಕ್ಷ ಕೆ.ಬಿ. ವೆಂಕಟೇಶ್ವರ, ಸಾಧನಾ ಹಿರೇಮಠ, ವಿಜಯಲಕ್ಷ್ಮಿ, ಸುರೇಖಾ ಮಲ್ಲನಗೌಡ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಗುಣ, ಜ್ಯೋತಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಭಾಗವಹಿಸಿದ್ದರು.