ಸಚಿವ ಬಿ.ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣದ ಪ್ರಮುಖ ಆರೋಪಿ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ 50ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.ಸೋಮವಾರ ತಹಸೀಲ್ದಾರ್ ಕಚೇರಿ ಎದುರು ನಾಗೇಂದ್ರ ವಿರುದ್ಧ ಪ್ರತಿಭಟಿಸಿ ನಂತರ ಹನುಮಂತಪ್ಪ ವೃತ್ತದಿಂದ ಅಜಾದ್ ವೃತ್ತದ ಮೂಲಕ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ರಾಜ್ಯದ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ನಿಗಮದ ಹಣ ಲೂಟಿ ಹೊಡೆದವರಿಗೆ ಸಂಪುಟದಲ್ಲಿ ಮಣೆ ಹಾಕಿ ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ನೀಡುತ್ತಿದೆ ಎಂದು ಆರೋಪಿಸಿದ ಕಾರ್ಯರ್ತರು ಸರ್ಕಾರ- ನಾಗೇಂದ್ರ ವಿರುದ್ಧ ಘೋಷಣೆ ಕೂಗಿದರು. ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.ಪೊಲೀಸರು ಎಸ್ಪಿ ಕಚೇರಿ ಬಳಿಯೇ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ಉಂಟಾಯಿತು.ಪೊಲೀಸರ ಮನವೊಲಿಕೆಗೂ ಜಗ್ಗದ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ತಳ್ಳಿ ಡಿಸಿ ಕಚೇರಿ ಕಡೆಗೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಶೆಟ್ಟಿ, ನಗರಾಧ್ಯಕ್ಷ ಪುಷ್ಪರಾಜ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಕೆ.ಪಿ.ವೆಂಕಟೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪುಣ್ಯಪಾಲ್, ಬೆಳವಾಡಿ ರವೀಂದ್ರ, ನರೇಂದ್ರ, ವಿನೋದ್ ಬೊಗಸೆ, ಪ್ರದೀಪ್ ಕೋಟೆ, ಹಿರೇಮಗಳೂರು ಕೇಶವ, ನಂದೀಶ್ ಮದಕರಿ, ಕಬೀರ್ ಸೇರಿ ೫೦ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಉಪಸಭಾಪತಿ ಎಂ. ಕೆ. ಪ್ರಾಣೇಶ್ ಬೋರ್ಗಲ್ಲ ಮೇಲೆ ಮಳೆ ಸುರಿದಂತೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಸ್ವಾರ್ಥಕ್ಕೆ ಏನು ಮಾಡಬೇಕೋ ಅದನ್ನು ಮಾಡುತ್ತಿದೆ ಹೊರತು, ರಾಜ್ಯದ ಜನತೆಗೆ ಏನನ್ನೂ ಮಾಡುತ್ತಿಲ್ಲ ಎಂದು ಆರೋಪಿಸಿದರು.ಬಹುಶಃ ಹಲವಾರು ಯೋಜನೆ ಜಾರಿಗೆ ಸರ್ಕಾರದ ಬಳಿ ಹಣವಿಲ್ಲ. ಪಿಂಚಣಿ, ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಅಂಗವಿಕಲರ ವೇತನ ನೀಡಲೂ ಸರ್ಕಾರದ ಬಳಿ ಹಣವಿಲ್ಲ ಎಂದು ಟೀಕಿಸಿದರು.
ಸರ್ಕಾರದ ಸಾವಿರಾರು ಕೋಟಿ ಹಣ ಎಲ್ಲಿ ಹೋಗುತ್ತಿದೆ? ಇಂತಹ ಹಣ ನಾಗೇಂದ್ರ ಅವರಂತಹ ಹಲವಾರು ಸಚಿವರ ಕೈ ಸೇರುತ್ತಿದೆ. ಕಳೆದ 2 ವರ್ಷಗಳಲ್ಲಿ ಬಯಲಿಗೆ ಬಂದಿರುವ ಹಗರಣಗಳನ್ನು ಉಲ್ಲೇಖಿಸಿದರು. ಕಾಂಗ್ರೆಸ್ ಸರ್ಕಾರ ಹಗರಣ ಗಳ ಹಣದ ಕುರಿತು ಯಾವುದೇ ಸ್ಪಷ್ಟನೆ ನೀಡುತ್ತಿಲ್ಲ ಎಂದು ಆರೋಪಿಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇರಿದಂತೆ ಸಂಘಟನೆಗಳ ಮೇಲೆ ಗೂಬೆ ಕೂರಿಸಿ ಜನರ ಗಮನ ಬೇರೆಡೆಗೆ ಸೆಳೆಯುವ ಕೆಲಸ ಸರ್ಕಾರ ಮಾಡುತ್ತಿದೆ ಎಂದರು.
ಭ್ರಷ್ಟಾಚಾರದ ಮೂಲಕ ಹಣ ಸಂಪಾದಿಸಿ, ಮುಂದಿನ ಚುನಾವಣೆಗೆ ಅದನ್ನು ಕ್ರೋಡೀಕರಿಸುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದ ಅವರು. ಕಳಂಕಿತರನ್ನು ಸಚಿವರಾಗಿ ಮಾಡುವ ಹಿಂದಿನ ನಿಮ್ಮ ಉದ್ದೇಶವೇನು? ಎಂದು ಪ್ರಶ್ನಿಸಿದರು.