ನಾಸೀರ್‌ ಹುಸೇನ್ ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರ ಆಗ್ರಹ

| Published : Mar 07 2024, 01:46 AM IST

ನಾಸೀರ್‌ ಹುಸೇನ್ ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ವಿಧಾನಸೌಧದ ಮೊಗಸಾಲೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಪ್ರಕರಣ ಮರೆಮಾಚಲು ಯತ್ನಿಸಿದ ರಾಜ್ಯಸಭೆ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ರಾಜೀನಾಮೆ ನೀಡಬೇಕು. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸಿರುವುದು ಸ್ವಾಗತಾರ್ಹ. ಆದರೆ, ಕಾಂಗ್ರೆಸ್ ಸರ್ಕಾರ ಬಂದ ನಂತರ ಗರಿಗೆದರುತ್ತಿರುವ ಉಗ್ರ ಚಟುವಟಿಕೆ.

ಕನ್ನಡಪ್ರಭ ವಾರ್ತೆ ಮಂಡ್ಯ

ವಿಧಾನಸೌಧದ ಮೊಗಸಾಲೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಪ್ರಕರಣ ಮರೆಮಾಚಲು ಯತ್ನಿಸಿದ ರಾಜ್ಯಸಭೆ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ನೀಡಿ, ನಂತರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸಿರುವುದು ಸ್ವಾಗತಾರ್ಹ. ಇವರ ವಿರುದ್ಧ ಕಠಿಣ ಕಾನೂನು ಜರುಗಿಸಬೇಕು. ನಮ್ಮ ನೆಲದಲ್ಲಿಯೇ ನಿಂತು ವಿಧಾನಸೌಧದ ಮೊಗಸಾಲೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ನಾಚಿಕೆಗೇಡಿನ ಸಂಗತಿ. ಇದನ್ನು ಕಾಂಗ್ರೆಸ್ ಮುಖಂಡರು ಸಮರ್ಥಿಸಿಕೊಂಡು ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ ಎಂದು ಹೇಳುವ ಮೂಲಕ ದೇಶದ್ರೋಹಿಗಳನ್ನು ಬೆಂಬಲಿಸಿರುವುದು ವಿಪರ್ಯಾಸ ಎಂದು ಟೀಕಿಸಿದರು.

ಪ್ರಕರಣ ಮರೆಮಾಚಲು ಯತ್ನಿಸಿದ ರಾಜ್ಯಸಭೆ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ವಿರುದ್ಧ ಕಾನೂನು ಕ್ರಮ ಆಗಬೇಕು. ತಕ್ಷಣವೇ ರಾಜ್ಯಸಭಾ ಸ್ಥಾನಕ್ಕೆ ಅವರಿಂದ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಇಂತಹ ಭಯೋತ್ಪಾದನೆಯ ಚಟುವಟಿಕೆಗಳು ಗರಿಗೆದರುತ್ತವೆ, ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಸಂಪೂರ್ಣ ವಿಫಲವಾಗಿದೆ, ಇದು ಹೀಗೆ ಮುಂದವರಿದರೆ ಪ್ರತಿಭಟನೆಯನ್ನು ರಾಜ್ಯಾದ್ಯಂತ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ನಗರ ಘಟಕದ ಅಧ್ಯಕ್ಷ ವಸಂತ್, ಸಮಿತಿಯ ದೊಡ್ಡಾಚಾರಿ, ಪೀಹಳ್ಳಿ ರಮೇಶ್, ಶಂಕರ, ಶಿವಲಿಂಗಯ್ಯ, ಸಿ.ಟಿ.ಮಂಜುನಾಥ್, ಶಿವಕುಮಾರ ಆರಾಧ್ಯ, ನವನೀತ್‌ಗೌಡ, ಪ.ನ.ಸುರೇಶ್ ವಹಿಸಿದ್ದರು.