ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

| Published : Aug 23 2025, 02:00 AM IST

ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಇಂತಹ ದುಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್‍ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಸೇರಿದ ಕಾರ್‍ಯಕರ್ತರು, ಬೆಂಗಳೂರು- ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಕೇವಲ ಕರ್ನಾಟಕವಲ್ಲದೆ ದೇಶಾದ್ಯಂತ ಕೋಟ್ಯಂತರ ಭಕ್ತರನ್ನು ಹೊಂದಿದೆ. ನಿತ್ಯ ಲಕ್ಷಾಂತರ ಮಂದಿ ಭಕ್ತರು ಬಂದು ಹೋಗುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧಾಕೇಂದ್ರವಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲ ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದರ ಹಿಂದೆ ಹಿಂದೂಗಳ ಶ್ರದ್ಧಾ ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹುನ್ನಾರವಿದೆ. ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುವ ಷಡ್ಯಂತ್ರ ನಡೆದಿದೆ. ಭಾರತದ ನ್ಯಾಯ ಸಂಹಿತೆ ಅಡಿ ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೆ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರ ಲಕ್ಷಾಂತರ ರು. ಗಳನ್ನು ವ್ಯಯಿಸಿ ಆತ ಹೇಳಿದ ಕಡೆಗಳಿಗೆಲ್ಲಾ ಗುಂಡಿಗಳನ್ನು ತೋಡಿದೆ ಎಂದು ಕಿಡಿಕಾರಿದರು.

ಅನಾಮಿಕನ ಹಿಂದಿರುವ ದುಷ್ಟ ವ್ಯಕ್ತಿಗಳು ಯಾರು ಮತ್ತು ಅವರು ಮಾಡುತ್ತಿರುವ ಸಂಚುಗಳೇನು ಎಂಬುದನ್ನು ಈವರೆಗೂ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ತಿಳಿಸಿಲ್ಲ. ಸಮಾಜ ವಿರೋಧಿ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಇಂತಹ ದುಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಎಂ.ವಸಂತ್‌ಕುಮಾರ್, ಮುಖಂಡರಾದ ಅಶೋಕ್ ಜಯರಾಂ, ಪುಟ್ಟಸ್ವಾಮಿ, ಭಾಗ್ಯಮ್ಮ, ಎಸ್.ಶಿವಕುಮಾರ್ ಆರಾಧ್ಯ, ಚಂದ್ರು, ಪ್ರಸನ್ನಕುಮಾರ್, ಶಿವು, ಟಿ.ಎಸ್.ವಿವೇಕ್, ಮಾದರಾಜೇ ಅರಸ್, ಆನಂದ್, ವಿಶ್ವ, ಎಚ್.ಆರ್.ಅಶೋಕ್‌ಕುಮಾರ್, ಸಿ.ಟಿ.ಮಂಜುನಾಥ್, ಭೈರೇಶ್ ಸೇರಿ ಹಲವರು ಭಾಗವಹಿಸಿದ್ದರು.