ಸಾರಾಂಶ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಂಡ ಸರ್ಕಾರವಾಗಿದೆ.
ಹೊಸಪೇಟೆ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾದಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭಾರೀ ಅವ್ಯವಹಾರ ನಡೆದಿದೆ. ಈ ಹಣ ವರ್ಗಾವಣೆಯಾದ ಕುರಿತು ತನಿಖೆ ನಡೆಸಬೇಕು. ಸಚಿವ ಬಿ.ನಾಗೇಂದ್ರ ಕೂಡಲೇ ರಾಜೀನಾಮೆ ಸಲ್ಲಿಸಬೇಕು. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಂಡ ಸರ್ಕಾರವಾಗಿದೆ. ಬಹುಕೋಟಿ ರುಪಾಯಿ ಲೂಟಿ ನಡೆದಿದ್ದರೂ ಸಚಿವರ ರಾಜೀನಾಮೆ ಪಡೆದಿಲ್ಲ. ಎಸ್‌ಐಟಿ ರಚನೆ ಮಾಡಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.ನಿಗಮದ ಅಧೀಕ್ಷಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಪ್ರಭಾವಿಗಳ ಹೆಸರು ಉಲ್ಲೇಖಿಸಿದ್ದಾರೆ. ಕೂಡಲೇ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರೀ ಲೂಟಿ, ಹಗರಣದಲ್ಲಿ ಮುಳುತ್ತದೆ. ಬಡವರ ಬಗ್ಗೆ ಕಾಳಜಿ ಇಲ್ಲ. ಚುನಾವಣೆಗೋಸ್ಕರ ವಾಲ್ಮೀಕಿ ನಿಗಮದ ಹಣ ಲೂಟಿ ಮಾಡಲಾಗಿದೆ. ಎಸ್‌ಟಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಹಣ ಲೂಟಿ ನಿಜಕ್ಕೂ ಖಂಡನೀಯ ಎಂದು ದೂರಿದರು.
ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಲು ಮುಂದಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.ಮುಖಂಡರಾದ ಅಡವಿ ಸ್ವಾಮಿ, ಸಚಿನಕುಮಾರ, ಜಗದೀಶ್ ಕಾಮಟಗಿ, ದ್ವಾರಕೀಶ್, ಸೂರಿ ಬಂಗಾರು, ಚನ್ನವೀರ ಬದ್ರಿಕಟ್ಟಿ, ಶ್ರೀಕಾಂತ್ ಪೂಜಾರ ಮತ್ತಿತರರಿದ್ದರು.