ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಶೀಘ್ರದಲ್ಲಿಯೇ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ವಿರೋಧ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಅರವಿಂದ್ ಬೆಲ್ಲದ್ ಹೇಳಿದರು
ಕನ್ನಡಪ್ರಭ ವಾರ್ತೆ ಶಿರಾ
ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಶೀಘ್ರದಲ್ಲಿಯೇ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ವಿರೋಧ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಅರವಿಂದ್ ಬೆಲ್ಲದ್ ಹೇಳಿದರು.ಸೋಮವಾರ ನಗರದ ಖಾಸಗೊ ಹೊಟೆಲ್ನಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ಖಂಡಿಸಿ ಬಿಜೆಪಿ ವಿಭಾಗ ಮಟ್ಟದಲ್ಲಿ ಹೋರಾಟ ನಡೆಸಲು ಹಮ್ಮಿಕೊಂಡಿದ್ದ ಪೂರ್ವಸಿದ್ದತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಾಲು, ಮೊಸರು, ಕೆ.ಎಸ್.ಆರ್.ಟಿ.ಸಿ. ಬಸ್ ಪ್ರಯಾಣ ದರ, ಜನನ ಮತ್ತು ಮರಣ ಪ್ರಮಾಣ ಪತ್ರ, ಆಸ್ತಿ ನೊಂದಣಿ ಶುಲ್ಕ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ದಾವಣಗೆರೆ, ಚಿತ್ರದುರ್ಗ, ಮಧುಗಿರಿ, ತುಮಕೂರು ವಿಭಾಗದಿಂದ ಹೋರಾಟ ಮಾಡುವ ಬಗ್ಗೆ ಇಂದು ಪೂರ್ವ ಭಾವಿ ಸಭೆ ಮಾಡಿದ್ದೇವೆ. ಹಾಗೂ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಡೆಸಬೇಕಾದ ಕಾರ್ಯತಂತ್ರದ ಬಗ್ಗೆಯೂ ಇಂದು ಸಭೆ ನಡೆಸುತ್ತಿದ್ದೇವೆ ಎಂದರು. ಈಗಾಗಲೇ ರಾಜ್ಯ ಸರ್ಕಾರ ಎಲ್ಲ ವಿಭಾಗದಲ್ಲಿಯೂ ವಿಫಲವಾಗಿವೆ. ಗ್ಯಾರಂಟಿ ನೀಡುತ್ತೇವೆ ಎಂದು ಹೇಳಿದ್ದಷ್ಟೇ ಸಾಧನೆಯಾಗಿದೆ ಹೊರತು ಬೊಕ್ಕಸದಲ್ಲಿ ಹಣವಿಲ್ಲವೆಂದು ಸ್ವತಃ ಸಿಎಂ ಅವರೇ ಒಪ್ಪಿಕೊಂಡಿದ್ದಾರೆ. ಇನ್ನೂ ಸಾರಿಗೆ ಸಚಿವ ಬೈರತಿ ಸುರೇಶ ಸಂಬಳ ಕೊಡಲು ಹಣವಿರಲಿಲ್ಲ ಎನ್ನುವ ಮೂಲಕ ಇಲಾಖೆಯಲ್ಲಿ ಹಣವಿಲ್ಲ ಎಂದು ಹೇಳಿರುವುದು ಈ ರಾಜ್ಯ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ತಿವಿದರು.ಪತ್ರಿಕಾಗೋಷ್ಠಿಯಲ್ಲಿ ಮಧುಗಿರಿ ಸಂಘಟನಾ ಜಿಲ್ಲೆಯ ಜಿಲ್ಲಾಧ್ಯಕ್ಷ ಚಿದಾನಂದ್ ಎಂ ಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ, ಹರಿಹರ ಶಾಸಕ ಬಿ. ಪಿ ಹರೀಶ್, ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್ ಹಾಗೂ ಕೆ. ಎಂ ಸುರೇಶ್, ಮಾಜಿ ಎಂಎಲ್ಸಿ ಶಿವಯೋಗಿ ಸ್ವಾಮಿ, ಮಾಜಿ ಶಾಸಕ ಎಸ್.ವಿ ರಾಮಚಂದ್ರಪ್ಪ, ಬಿಜೆಪಿ ವಿಭಾಗ ಸಂಘಟನಾ ಸಂಚಾಲಕರಾದ ಎ.ಮುರುಳಿ, ದಾವಣಗೆರೆ ಜಿಲ್ಲಾಧ್ಯಕ್ಷರಾದ ನಾಗರಾಜು ಮೇಳ್ಳಿಕಟ್ಟೆ, ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಕೆ. ಟಿ ಕುಮಾರ ಸ್ವಾಮಿ, ನಿಕಟ ಪೂರ್ವ ಅಧ್ಯಕ್ಷರಾದ ಬಿ.ಸಿ ಹನುಮಂತೇ ಗೌಡ, ಮಾಜಿ ನಿಗಮ ಮಂಡಳಿ ಅಧ್ಯಕ್ಷ ಬಿ.ಕೆ ಮಂಜುನಾಥ್, ಕೊರಟಗೆರೆ ಮುಖಂಡರಾದ ಅನಿಲ್ ಕುಮಾರ್, ದಾವಣಗೆರೆ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ವಿರೇಶ್, ಬಸವರಾಜ್ ನಾಯ್ಕ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಬರಗೂರು ಶಿವಕುಮಾರ್, ದಾವಣಗೆರೆ ಹಾಗೂ ಮಧುಗಿರಿ ಸಂಘಟನಾ ಜಿಲ್ಲೆಯ ಮಹಿಳಾ ಮೋರ್ಚಾ ಅಧ್ಯಕ್ಷರುಗಳು, ಜಿಲ್ಲಾ ಮುಖಂಡರುಗಳು, ವಿಭಾಗದ ಎಲ್ಲಾ ಮಂಡಲ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಿದ್ದರು.