ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ದೇಶದ 13.03 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿಯುತ್ತಿದೆ.

ಚುನಾವಣಾ ಆಯುಕ್ತರನ್ನು ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಕುಂದಗೋಳ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ದೇಶದ 13.03 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿಯುತ್ತಿದೆ ಎಂದು ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಕಲ್ಮೇಶ ಪಟೇಲ್ ಆರೋಪಿಸಿದರು.

ಪಟ್ಟಣದಲ್ಲಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಭಾನುವಾರ "ವೋಟ್ ಬಚಾವ್, ದೇಶ್ ಬಚಾವ್ " ಹಾಗೂ "ಸಂವಿಧಾನ ಉಳಿಸಿ, ದೇಶ ಉಳಿಸಿ " ಘೋಷಣೆಯಡಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರನ್ನು ಬಳಸಿಕೊಂಡು ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಡಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನವಾಗಿದೆ. ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ಕಸಿದುಕೊಳ್ಳುವ ಪ್ರಯತ್ನವನ್ನು ಸಹಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯುಕ್ತರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಚಂದ್ರಶೇಖರ ಜುಟ್ಟಲ್ ಮಾತನಾಡಿ, ದೇಶದ ಪ್ರಜೆಗಳ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರವನ್ನು ಕೇಂದ್ರದ ಬಿಜೆಪಿ ಸರ್ಕಾರ ನಡೆಸುತ್ತಿದೆ. ಇದರ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ದೇಶಾದ್ಯಂತ ಹೋರಾಟ ರೂಪಿಸುತ್ತಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಬೇಕು ಎಂದರು.

ಪ್ರತಿಭಟನಾ ಮೆರವಣಿಗೆಯು ಪಟ್ಟಣದ ಗಾಳಿಮರಮ್ಮ ದೇವಸ್ಥಾನದ ಬಳಿಯಿಂದ ಆರಂಭಗೊಂಡು, ಪ್ರಮುಖ ಬೀದಿಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಾಗಿತು. ಬಳಿಕ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಬಹಿರಂಗ ಸಭೆಯಾಗಿ ಪರಿವರ್ತನೆಗೊಂಡಿತು.

ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ, ಷಣ್ಮುಖ ಶಿವಳ್ಳಿ, ತಾಲೂಕು ಅಧ್ಯಕ್ಷ ಜಗದೀಶ ಉಪ್ಪಿನ್, ಗ್ಯಾರಂಟಿ ಸಮಿತಿ ಅಧ್ಯಕ್ಷ ನೆಹರು ಪಾಟೀಲ್, ನಗರ ಘಟಕದ ಅಧ್ಯಕ್ಷ ಸಲಿಂ ಕ್ಯಾಲ್ಕುಂಡ, ಮಂಜುನಾಥ ಮಲ್ಲಪ್ಪನವರ್, ಗೌಡಪ್ಪಗೌಡ ಪಾಟೀಲ್, ಶಾಕಿರ್ ಸನದಿ, ಸತೀಶ ಕೊಭ್ಯಯನವರ, ಸುರೇಶ ಸವಣೂರ, ಮಲ್ಲಿಕಾರ್ಜುನ ಕಿರೇಸೂರ ಇದ್ದರು.