ಉಡುಪಿ ಜಿಲ್ಲೆಯನ್ನು ಎಲ್ಲ ರೀತಿಯಲ್ಲೂ ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಮೇ 16ರಂದು ಉಡುಪಿಗೆ ಬರುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದ್ದಾರೆ.

ಉಡುಪಿ: ಉಡುಪಿ ಜಿಲ್ಲೆಯನ್ನು ಎಲ್ಲ ರೀತಿಯಲ್ಲೂ ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಮೇ 16ರಂದು ಉಡುಪಿಗೆ ಬರುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅದರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೇ 2023 ರಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ ತೋರಿ ಉಡುಪಿ ಜಿಲ್ಲೆಯ ಜನರಿಗೆ ಅನ್ಯಾಯ ಮಾಡುತ್ತಿದೆ. 2013ರಲ್ಲಿ ಉಡುಪಿ ನಗರ ಭಾಗಕ್ಕೆ ಆರಂಭಗೊಂಡ ನರ್ಮ ಬಸ್ ಯೋಜನೆಯಲ್ಲಿ 40 ಕ್ಕೂ ಹೆಚ್ಚು ಬಸ್ಸುಗಳು ಓಡಾಡುತಿದ್ದವು, ಇಂದು ಸರ್ಕಾರ ಗ್ಯಾರಂಟಿ ಯೋಜನೆಯಡಿ ಉಚಿತ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ ಶೇ 50 ಬಸ್ ಗಳನ್ನು ಕಡಿತಗೊಳಿಸಿದೆ.

ಉಡುಪಿ ಜಿಲ್ಲಾ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸದೆ ಜಿಲ್ಲೆಯ ಬಡ ರೋಗಿಗಳ ಜೀವದೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಆಟವಾಡುತ್ತಿದೆ. ಉಡುಪಿಯ ಪರ್ಯಾಯೋತ್ಸವಕ್ಕೂ ಅನುದಾನ ನೀಡುವ ಭರವಸೆಯನ್ನು ನೀಡಿ ನಂತರ ಬಿಡಿಗಾಸು ನೀಡದೆ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.ಕಂದಾಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಭೂಮಾಪಕರ ಬಹುಕಾಲದ ಬೇಡಿಕೆಯನ್ನು ಈಡೇರಿಸದೆ ಸತತ ಎರಡು ತಿಂಗಳುಗಳಿಂದ ಭೂಮಾಪಕರು ಮುಷ್ಕರ ನಡೆಸುತ್ತಿದ್ದು, ಇದರಿಂದ ಜನರಿಗೆ ಅನ್ಯಾಯವಾಗುತ್ತಿದ್ದರೂ, ಸಮಸ್ಯೆ ಪರಿಹರಿಸದೇ ಜಾಣ ಕುರುಡುತನ ಪ್ರದರ್ಶಿಸುತ್ತಿದೆ.

ಉಡುಪಿ ಜಿಲ್ಲೆಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಈ ನಿರ್ಲಕ್ಷ್ಯದ ವಿರುದ್ಧ ಮೇ 16ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿರಾಮ್ ಸುವರ್ಣ ಉಪಸ್ಥಿತರಿದ್ದರು.