ಪ್ರತಿಯೊಬ್ಬರು ಸ್ವಯಿಚ್ಛೆಯಿಂದ ರಕ್ತದಾನಕ್ಕೆ ಮುಂದಾಗಿ: ಸಿಇಒ ತುಕಾರಾಂ

| Published : Oct 10 2023, 01:01 AM IST

ಪ್ರತಿಯೊಬ್ಬರು ಸ್ವಯಿಚ್ಛೆಯಿಂದ ರಕ್ತದಾನಕ್ಕೆ ಮುಂದಾಗಿ: ಸಿಇಒ ತುಕಾರಾಂ
Share this Article
  • FB
  • TW
  • Linkdin
  • Email

ಸಾರಾಂಶ

ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಜಾಗೃತಿ ಜಾಥಾಕ್ಕೆ ಸಿಇಒ ಚಾಲನೆ
ಕನ್ನಡಪ್ರಭ ವಾರ್ತೆ ರಾಯಚೂರು ಸ್ವಯಂ ರಕ್ತದಾನ ಮಾಡುವ ಮೂಲಕ ವ್ಯಕ್ತಿಗೆ ಜೀವದಾನ ಮಾಡಬಹುದಾಗಿದ್ದು, ಪ್ರತಿಯೊಬ್ಬರು ಸ್ವಯಿಚ್ಛೆಯಿಂದ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು. ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ, ರಿಮ್ಸ್ ಆಸ್ಪತ್ರೆ, ನವೋದಯ ಆಸ್ಪತ್ರೆ, ಜಿಲ್ಲಾ ರಕ್ತನಿಧಿ ಕೇಂದ್ರಗಳು, ಲಯನ್ಸ್ ಕ್ಲಬ್, ಎಸ್ಕೆಇಎಸ್ ಪ್ಯಾರಾಮೆಡಿಕಲ್ ಕಾಲೇಜು, ರೋಟರಿ ಕ್ಲಬ್, ರೆಡ್ ಕ್ರಾಸ್ ಸಂಸ್ಥೆ, ರೆಡ್ ರಿಬ್ಬನ್ ಸಂಸ್ಥೆ, ಎನ್ಎಸ್ಎಸ್ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು. ರಕ್ತದಾನವು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ದಾನವಾಗಿದ್ದು, ಪ್ರತಿಯೊಬ್ಬರು ಸ್ವಯಿಚ್ಛೆಯಿಂದ ರಕ್ತದಾನ ಮಾಡಲು ಮುಂದಾಗಬೇಕು ಇದರಿಂದ ವ್ಯಕ್ತಿಗಳಿಗೆ ಜೀವದಾನ ಮಾಡಿದಂತಾಗುತ್ತದೆ. ರಕ್ತದಾನ, ಪ್ಲಾಸ್ಮಾ ದಾನ ಮಾಡುವ ಮೂಲಕ ಜೀವನವನ್ನು ಹಂಚಿಕೊಳ್ಳಬಹುದಾಗಿದ್ದು, ಮತ್ತು ರಕ್ತದಾನದಿಂದ ಆರೋಗ್ಯವು ವೃದ್ಧಿಯಾಗುತ್ತದೆ. ಆದ್ದರಿಂದ ಹೆಚ್ಚು ಹೆಚ್ಚು ರಕ್ತದಾನ ಮಾಡಲು ಮುಂದಾಗಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಸೆ.17 ರಿಂದ ಈವರೆಗೂ ಒಟ್ಟು 16 ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗಿದ್ದು, ಅದರಲ್ಲಿ ಒಟ್ಟು 545 ಜನರಿಂದ ರಕ್ತವನ್ನು ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕೆಂದು ತಿಳಿಸಿದರು. ಜಾಗೃತಿ ಜಾಥಾವು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಟಿಪ್ಪು ಸುಲ್ತಾನ ರಸ್ತೆ, ಜಿಲ್ಲಾ ಕಾರಾಗೃಹ ಮಾರ್ಗವಾಗಿ, ಝಾಕೀರ್ ಹುಸೇನ್ ವೃತ್ತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರೆಗೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ತಾಲೂಕು ಆರೋಗ್ಯಾಧಿಕಾರಿ ಡಾ.ಮಹ್ಮದ್ ಶಾಕೀರ, ಜಿಲ್ಲಾ ಮಾನಸಿಕ ರೋಗ ತಜ್ಞ ಮನೋಹರ ಪತ್ತಾರ ಸೇರಿದಂತೆ, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ರಕ್ತ ನಿಧಿ ಕೇಂದ್ರಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು,ಎನ್ಇಒ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.