ಸಾರಾಂಶ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ದಾವಣಗೆರೆ ನಗರದ 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ದಾವಣಗೆರೆ ನಗರದ 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕೆಇಎ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹೇಳಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆ.1ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ 2ನೇ ಪತ್ರಿಕೆಯ ಪರೀಕ್ಷೆ ನಡೆಯಲಿದೆ. ಎ.ವಿ.ಕಮಲಮ್ಮ ಪಿಯು ಕಾಲೇಜು ಕೇಂದ್ರದಲ್ಲಿ 552, ಮೋತಿ ವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು 553, ರಾಜನಹಳ್ಳಿ ಸೀತಮ್ಮ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು 552 ಹಾಗೂ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ 552 ಅಭ್ಯರ್ಥಿಗಳು ಸೇರಿ ಒಟ್ಟು 2209 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು ಎಂದರು.
ಅಭ್ಯರ್ಥಿಗಳು ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರಬಾರದು. ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಕೇಂದ್ರದೊಳಗೆ ಪ್ರವೇಶ ಕಲ್ಪಿಸಲಾಗುವುದು. ಆದ್ದರಿಂದ ಸಾಕಷ್ಟು ಮುಂಚಿತವಾಗಿ ಕೇಂದ್ರದಲ್ಲಿರಬೇಕು. ಕೆಇಎಯಿಂದ ಇತರೆ ಜಿಲ್ಲೆಗಳಿಂದ ಪರೀಕ್ಷಾ ಮೇಲ್ವಿಚಾರಕರನ್ನು ನೇಮಕ ಮಾಡಲಿದ್ದು, ಜಿಲ್ಲಾಮಟ್ಟದಲ್ಲಿ ಪ್ರತಿ ಕೇಂದ್ರಕೆ ಒಬ್ಬರಂತೆ ನೇಮಕ ಮಾಡಲಾಗುತ್ತದೆ. ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಸುವ ಮೂಲಕ ಯಾವುದೇ ಪರೀಕ್ಷಾ ಅವ್ಯವಹಾರಗಳಿಗೆ ಅವಕಾಶ ಇಲ್ಲದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
144 ಸೆಕ್ಷನ್ ಜಾರಿ:
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಯಾವುದೇ ಜೆರಾಕ್ಸ್ ಅಂಗಡಿ, ಇಂಟರ್‌ನೆಟ್ ಸೆಂಟರ್‌ಗಳನ್ನು ತೆರೆಯುವಂತಿಲ್ಲ ಎಂದರು.
ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.