ಹಾವೇರಿ:ಇಲ್ಲಿಯ ಜಿಲ್ಲಾ ನ್ಯಾಯಾಲಯಕ್ಕೆ ಎರಡು ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆ ಸೋಮವಾರ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆದರಿಕೆ ಮಾಹಿತಿ ತಿಳಿಯುತ್ತಿದ್ದಂತೆಯೇ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ವಕೀಲರು, ಕಕ್ಷಿದಾರರು ಹಾಗೂ ನ್ಯಾಯಾಲಯದ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಯಿತು.
ನ್ಯಾಯಾಲಯದಲ್ಲಿ ಬಾಂಬ್ ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಸಂದೇಶ ಕಳುಹಿಸಿರುವ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಹಾವೇರಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ನ್ಯಾಯಾಲಯದ ಆವರಣವನ್ನು ತಮ್ಮ ವಶಕ್ಕೆ ಪಡೆದು ಪರಿಶೀಲನೆ ಆರಂಭಿಸಿದರು.ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿಯೂ ಸ್ಥಳಕ್ಕೆ ಭೇಟಿ ನೀಡಿ ನ್ಯಾಯಾಲಯದ ಕಟ್ಟಡ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಕೂಲಂಕಷವಾಗಿ ತಪಾಸಣೆ ನಡೆಸಿದರು. ಯಾವುದೇ ಅನುಮಾನಾಸ್ಪದ ವಸ್ತುಗಳಿಗಾಗಿ ತೀವ್ರ ಶೋಧ ಕಾರ್ಯ ನಡೆಸಲಾಯಿತು. ಬೆದರಿಕೆ ಹಿನ್ನೆಲೆಯಲ್ಲಿ ನ್ಯಾಯಾಲಯದ ಹೊರಭಾಗದಲ್ಲಿ ವಕೀಲರು, ಕಕ್ಷಿದಾರರು ಹಾಗೂ ಸಾರ್ವಜನಿಕರು ಆತಂಕದಿಂದ ಜಮಾಯಿಸಿದ್ದರು. ತಪಾಸಣೆ ಪೂರ್ಣಗೊಳ್ಳುವವರೆಗೆ ಯಾರನ್ನೂ ನ್ಯಾಯಾಲಯದ ಒಳಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ತಪಾಸಣೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬೆದರಿಕೆ ಸಂದೇಶ ಎನ್ನಲಾಗಿದೆ. ಮಧ್ಯಾಹ್ನದ ನಂತರ ಎಂದಿನಂತೆ ಕೋರ್ಟ್ ಕಲಾಪಗಳು ನಡೆದವು.
ಎರಡು ದಿನಗಳ ಹಿಂದೆ ಜೂ.27ರಂದು ಜಿಲ್ಲಾ ನ್ಯಾಯಾಲಯಕ್ಕೆ ಬೆದರಿಕೆ ಸಂದೇಶ ಬಂದ ಹಿನ್ನೆಲೆ ತಪಾಸಣೆ ನಡೆಸಲಾಗಿತ್ತು. ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.