ಜಿಲ್ಲೆಯ ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ದೊರಕಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರೈತರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಬೇಕು. ಹಾವೇರಿ ಜಿಲ್ಲೆಯ ರೈತರಿಗೂ ಟನ್ ಕಬ್ಬಿಗೆ ₹3,600 ನೀಡಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಹಾವೇರಿ: ಜಿಲ್ಲೆಯ ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ದೊರಕಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರೈತರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಬೇಕು. ಹಾವೇರಿ ಜಿಲ್ಲೆಯ ರೈತರಿಗೂ ಟನ್ ಕಬ್ಬಿಗೆ ₹3,600 ನೀಡಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಕಬ್ಬಿನ ರಿಕವರಿ ಪ್ರಮಾಣವನ್ನು ಕಡಿಮೆ ತೋರಿಸಲಾಗುತ್ತಿದೆ. ಈ ಬಗ್ಗೆ ರೈತರು ಹಲವು ವರ್ಷಗಳಿಂದ ಧ್ವನಿ ಎತ್ತುತ್ತಿದ್ದಾರೆ. ಹಾವೇರಿ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳು ಕೃಷ್ಣಾ ಜಲಾನಯನ ಪ್ರದೇಶಕ್ಕೆ ಒಳಪಡುವುದರಿಂದ ಮೂರೂ ಜಿಲ್ಲೆಗಳಿಗೆ ಒಂದೇ ರೀತಿಯ ಮಾನದಂಡ ಅನ್ವಯಿಸಬೇಕು ಎಂದು ಒತ್ತಾಯಿಸಿದ್ದಾರೆ.ಕೃಷಿ ವಿಶ್ವವಿದ್ಯಾಲಯವು ಈ ಕುರಿತು ಸಮಗ್ರ ಸಂಶೋಧನೆ ನಡೆಸಿ ಶೇ.10ರಿಂದ 12ರಷ್ಟು ರಿಕವರಿ ಪರಿಗಣಿಸಬಹುದು ಎಂದು ವರದಿ ಸಲ್ಲಿಸಿದೆ. ಈ ವೈಜ್ಞಾನಿಕ ವರದಿಯನ್ನು ಆಧಾರವಾಗಿಟ್ಟುಕೊಂಡು ರಿಕವರಿ ಪ್ರಮಾಣ ನಿಗದಿಪಡಿಸಲು ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ಹೇಳಿದ್ದಾರೆ.
ಕಳೆದ ವರ್ಷ ಕಬ್ಬಿನ ರಿಕವರಿ ಪ್ರಮಾಣ ಶೇ.9ರಿಂದ 9.5ರಷ್ಟನ್ನೂ ಮೀರಿಲ್ಲ. ಇದರಿಂದ ರೈತರಿಗೆ ಅನ್ಯಾಯವಾಗಿದೆ. ಹೀಗಾಗಿ ಹಿಂದಿನ ವರ್ಷದ ಪರೀಕ್ಷಾ ವರದಿಗಳನ್ನು ಆಧರಿಸದೆ, ಪ್ರಸಕ್ತ ಸಾಲಿನಲ್ಲಿ ಬೆಳೆದಿರುವ ಕಬ್ಬಿನ ರಿಕವರಿಯನ್ನು ಸರ್ಕಾರದ ಅಧಿಕಾರಿಗಳ ನೇತೃತ್ವದಲ್ಲಿ ರೈತರ ಸಮ್ಮುಖದಲ್ಲೇ ಪರೀಕ್ಷಿಸಬೇಕು. ಎಲ್ಲರ ಸಮ್ಮುಖದಲ್ಲಿ ರಿಕವರಿ ಪ್ರಮಾಣ ದೃಢಪಡಿಸಿದ ಬಳಿಕ ಅದರ ಆಧಾರದ ಮೇಲೆ ಕಬ್ಬಿನ ದರ ನಿಗದಿಪಡಿಸಬೇಕು ಎಂದು ಸಲಹೆ ನೀಡಿದ್ದಾರೆ.ಈಗಾಗಲೇ ಬೆಳಗಾವಿಯಲ್ಲಿ ರೈತರ ಹೋರಾಟದ ಫಲವಾಗಿ ಪ್ರತಿ ಟನ್ ಕಬ್ಬಿಗೆ ₹3,600 ದರ ನಿಗದಿಯಾಗಿದೆ. ಅದೇ ಮಾನದಂಡವನ್ನು ಹಾವೇರಿ ಜಿಲ್ಲೆಯ ರೈತರಿಗೂ ಅನ್ವಯಿಸಿ ಮೊದಲ ಕಂತಿನ ಹಣವನ್ನು ತಕ್ಷಣ ಪಾವತಿಸಬೇಕು. ಸದ್ಯ ಕಾರ್ಖಾನೆಗಳು ಟನ್ಗೆ ₹3,100 ನೀಡುವುದಾಗಿ ತಿಳಿಸಿದ್ದು, ಈ ದರವನ್ನು ಹೆಚ್ಚಿಸುವ ಅಗತ್ಯವಿದೆ. ಜಿಲ್ಲಾಧಿಕಾರಿಗಳು ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಕಾರ್ಖಾನೆ ಮಾಲೀಕರು ಒಪ್ಪದಿದ್ದರೆ ಕಬ್ಬು ಆಯುಕ್ತರು ತಮ್ಮ ಅಧಿಕಾರ ಬಳಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.ಸಭೆಗೆ ಆಹ್ವಾನಿಸಿಲ್ಲ..
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಗೆ ತಮಗೆ ಯಾವುದೇ ಆಹ್ವಾನ ಬಂದಿಲ್ಲ. ಈ ಕುರಿತು ವಿಚಾರಿಸಿದಾಗ ಜನಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸಿಲ್ಲ ಎಂಬ ಮಾಹಿತಿ ದೊರೆತಿದೆ. ಹೀಗಾಗಿ ಸಭೆಗೆ ಹಾಜರಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಸಭೆಯಲ್ಲಿ ರೈತರ ಹಿತದೃಷ್ಟಿಯಿಂದ ಈ ಎಲ್ಲ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ. ರೈತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಬೊಮ್ಮಾಯಿ ಒತ್ತಾಯಿಸಿದ್ದಾರೆ.