ಶಿಕ್ಷಣವು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕಾಗಿದ್ದು, ಸರ್ಕಾರ ನೀಡುತ್ತಿರುವ ಸೌಲಭ್ಯ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು
ಕುಷ್ಟಗಿ: ಪಠ್ಯಪುಸ್ತಕ ಕೇವಲ ಪರೀಕ್ಷೆಗಾಗಿ ಮಾತ್ರವಲ್ಲ, ಜ್ಞಾನ ಸಂಪಾದನೆಗೆ ಮಾರ್ಗದರ್ಶಕಗಳಾಗಿವೆ. ವಿದ್ಯಾರ್ಥಿಗಳು ಆರಂಭದಿಂದಲೇ ಅಧ್ಯಯನದತ್ತ ಹೆಚ್ಚಿನ ಗಮನ ಹರಿಸಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಬಿಇಒ ಉಮಾದೇವಿ ಬಸಾಪೂರ ಹೇಳಿದರು.
ತಾಲೂಕಿನ ದೋಟಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಶಿಕ್ಷಣವು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕಾಗಿದ್ದು, ಸರ್ಕಾರ ನೀಡುತ್ತಿರುವ ಸೌಲಭ್ಯ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಉಪಪ್ರಾಚಾರ್ಯ ಡಿ.ಸುರೇಶ ಮಾತನಾಡಿ, ಇಂದಿನ ವಿದ್ಯಾರ್ಥಿಗಳೇ ನಾಳಿನ ದೇಶದ ಭವಿಷ್ಯವಾಗಿದ್ದು, ಶಿಕ್ಷಣದ ಮೂಲಕವೇ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಸಾಧ್ಯ. ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜತೆಗೆ ನೈತಿಕ ಮೌಲ್ಯ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕರನ್ನು ಶ್ಲಾಘಿಸಿದ ಬಿಇಒ: ದೋಟಿಹಾಳ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಬಿಇಒ ಉಮಾದೇವಿ ಬಸಾಪೂರು ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಗೊಂಡ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರ ಶ್ರಮ ಶ್ಲಾಘಿಸಿದ ಅವರು, ಮುಂದಿನ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶವೂ ಶೇ.90ಕ್ಕಿಂತಲೂ ಅಧಿಕ ಪ್ರತಿಶತ ತರಲು ಶ್ರಮಿಸಬೇಕು ಎಂದು ತಿಳಿಸಿದರು.