ಕುಡಿವ ನೀರಿನ ತೀವ್ರ ಸಮಸ್ಯೆ ಇದ್ದೆಡೆ ಬೋರ್‌ವೆಲ್

| Published : Aug 18 2025, 12:00 AM IST

ಸಾರಾಂಶ

ಜಿಲ್ಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಮಾತ್ರ ಹೊಸ ಬೋರ್‌ವೆಲ್‌ಗಳ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ಜಿಲ್ಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಮಾತ್ರ ಹೊಸ ಬೋರ್‌ವೆಲ್‌ಗಳ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೊಸ ಬೋರ್‌ವೆಲ್‌ಗಳಿಗಾಗಿ ಪ್ರಸ್ತಾವನೆ ನೀಡಿರುವ ಗ್ರಾಮಗಳಿಗೆ ಸಂಬಂಧಪಟ್ಟ ತಾಲೂಕಿನ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಪಿಡಿಓಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ನೀರಿನ ಅವಶ್ಯಕತೆ ಪ್ರಮಾಣವನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಕುಡಿಯುವ ನೀರು ಕಲುಷಿತವಾಗದಂತೆ ಕಾಲ-ಕಾಲಕ್ಕೆ ನೀರಿನ ಗುಣಮಟ್ಟವನ್ನು ಪರೀಕ್ಷಿಸಬೇಕು. ಜೊತೆಗೆ ಜೆ.ಜೆ.ಎಂ. ಕಾಮಗಾರಿಯಡಿ ನಿರ್ಮಿತ ಕುಡಿಯುವ ನೀರಿನ ನಳ ಹಾಗೂ ಕೊಳವೆ ಮಾರ್ಗಗಳು ಹಾನಿಯಾಗದಂತೆ ಗ್ರಾಮ ಪಂಚಾಯತ್ ಅಧಿಕಾರಿಗಳು ನಿಗಾವಹಿಸಬೇಕು ಎಂದು ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಜೆ.ಜೆ.ಎಂ. ಕಾಮಗಾರಿ ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರಲ್ಲದೆ, ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ಶೋಕಾಸ್ ನೋಟೀಸ್ ನೀಡಬೇಕೆಂದು ಉಪ ಕಾರ್ಯದರ್ಶಿ ಸಂಜೀವಪ್ಪ ಅವರಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ರಮೇಶ್, ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.