ಸಾರಾಂಶ
ಕನ್ನಡಪ್ರಭ ವಾರ್ತೆ ಪುತ್ತೂರು ಹುತ್ತಕ್ಕೆ ಪೂಜೆ ಸಲ್ಲಿಸುವ ಸಂಪ್ರದಾಯವಿರುವ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ನಳೀಲು ಸುಬ್ರಹ್ಮಣ್ಯ ದೇವಳದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಫೆ.೧೭ರಿಂದ ಆರಂಭಗೊಂಡು ಫೆ.೨೪ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಂತೋಷ್‌ಕುಮಾರ್ ರೈ ನಳೀಲು ತಿಳಿಸಿದ್ದಾರೆ.
ಅವರು ಬುಧವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಳೆದ ೨ ವರ್ಷದ ಅವಧಿಯಲ್ಲಿ ಕ್ಷೇತ್ರದಲ್ಲಿ ೧.೯೦ ಕೋಟಿ ರು. ವೆಚ್ಚದಲ್ಲಿ ಜೀರ್ಣೋದ್ಧಾರ ಕಾರ್ಯಗಳು ನಡೆದಿದೆ. ಫೆ.೧೬ರಂದು ಬೆಳಿಗ್ಗೆ ೯ ಗಂಟೆಗೆ ಪಾಕಶಾಲೆಯ ಉದ್ಘಾಟನೆ, ೧೦ ಗಂಟೆಗೆ ಉಗ್ರಾಣ ಮುಹೂರ್ತ, ಕಚೇರಿ ಉದ್ಘಾಟನೆ, ಹಸಿರು ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮಗಳು ನಡೆಯಲಿದೆ. ಫೆ.೧೭ರಂದು ಸಂಜೆ ೬ ಗಂಟೆಗೆ ತಂತ್ರಿ ತಂತ್ರಿವರ್ಯರು -ಋತ್ವಿಜರನ್ನು ಪೂರ್ಣಕುಂಭ ಸ್ವಾಗತ ನೀಡಿ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಗುವುದು. ಬಳಿಕ ದೇವತಾ ಪ್ರಾರ್ಥನೆಯೊಂದಿಗೆ ವೈದಿಕ ಮತ್ತು ತಾಂತ್ರಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ. ಸಂಜೆ ೭ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.ಫೆ.೧೮ರಿಂದ ೨೨ರ ತನಕ ಪ್ರತಿ ದಿನ ಬೆಳಗ್ಗೆ ೫ ಗಂಟೆಯಿಂದ ವೈದಿಕ ಮತ್ತು ತಾಂತ್ರಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ. ಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ ೧೧ ಗಂಟೆಯಿಂದ ಆರಂಭಗೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ ೭ ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಸಂದರ್ಭದಲ್ಲಿ ಪ್ರತಿ ದಿನ ಮಧ್ಯಾಹ್ನ ಮತ್ತು ರಾತ್ರಿ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ತಿಳಿಸಿದರು.
೨೨ರಂದು ಬ್ರಹ್ಮಕಲಶಾಭಿಷೇಕ: ಫೆ.೨೨ರಂದು ಬೆಳಿಗ್ಗೆ ೭.೪೮ರಿಂದ ೮.೩೨ರ ವರೆಗಿನ ಮೀನಲಗ್ನದಲ್ಲಿ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ೧೨ಗಂಟೆಗೆ ಮಹಾಪೂಜೆ, ಶ್ರೀ ಭೂತಬಲಿ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿದೆ. ಫೆ.೨೩ರಂದು ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ೩೩ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಬೆಳಗ್ಗೆ ಮಹಾಗಣಪತಿ ಹೋಮ, ಸಂಜೆ ರಂಗಪೂಜೆ, ದೇವರ ಬಲಿ ಹೊರಟು ಭೂತ ಬಲಿ ಉತ್ಸವ, ಹೊಸದಾಗಿ ನಿರ್ಮಿಸಿದ ವಸಂತ ಕಟ್ಟೆಯಲ್ಲಿ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಗೆ ನಡೆಯಲಿದೆ. ಫೆ.೨೪ರಂದು ಬೆಳಿಗ್ಗೆ ವ್ಯಾಫ್ರ ಚಾಮುಂಡಿ ಮತ್ತು ರುದ್ರಚಾಮುಂಡಿ ದೈವದ ನೇಮೋತ್ಸವ, ಸಂಜೆ ಗುಳಿಗ ದೈವದ ತಂಬಿಲ ಸೇವೆ ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಾಲಯ ಸಮಿತಿಯ ಸಂಚಾಲಕ ಸುರೇಶ್ ರೈ ವಿಟ್ಲ ಕೊಲ್ಯ ಮತ್ತು ಪ್ರಚಾರ ಮತ್ತು ಮಾಧ್ಯಮ ಸಮಿತಿಯ ಸಹಸಂಚಾಲಕ ಪ್ರವೀಣ್ ಚೆನ್ನಾವರ ಇದ್ದರು.