ಸಾರಾಂಶ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಶ್ರೀ ಕೃಷ್ಣ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ಮಣಿಪಾಲ
ಜಿಲ್ಲಾಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆ.20ರಂದು ಹಾಗೂ ಶ್ರೀ ಕೃಷ್ಣ ಜಯಂತಿಯನ್ನು ಆ.26ರಂದು ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.ಅವರು ಶನಿವಾರ ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಎರಡೂ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಮಲ್ಪೆಯ ನಾರಾಯಣಗುರು ಶಾಲೆಯಲ್ಲಿ ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗುತ್ತದೆ. ಅದಕ್ಕೆ ಪೂರ್ವಭಾವಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಅವರ ತತ್ವ ಹಾಗೂ ಆದರ್ಶಗಳ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಿ, ಅಂದು ಬಹುಮಾನ ವಿತರಿಸಲಾಗುವುದು ಎಂದರು.ಶ್ರೀ ಕೃಷ್ಣ ಜಯಂತಿಯನ್ನು ಉಡುಪಿಯ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗುತ್ತದೆ. ಈ ಅಂಗವಾಗಿ ಚಿಕ್ಕಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆಯನ್ನು ಆಯೋಜಿಸಿ, ಉತ್ತಮ ಪ್ರದರ್ಶನ ನೀಡುವ ಮಕ್ಕಳಿಗೆ ಬಹುಮಾನ ವಿತರಿಸಲಾಗುವುದು ಎಂದರು.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶ್ರೀ ಕೃಷ್ಣ ಜಯಂತಿಯನ್ನು ತಹಸೀಲ್ದಾರ್ ಉಸ್ತುವಾರಿಯಲ್ಲಿ ನಡೆಸಬೇಕು ಎಂದರು.ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರುಗಳ ಹಾಗೂ ಶ್ರೀ ಕೃಷ್ಣನ ಆದರ್ಶಗಳು ಜನಸಾಮಾನ್ಯರಿಗೆ ಮನಮುಟ್ಟುವಂತೆ ಕಾರ್ಯಕ್ರಮವನ್ನು ಆಯೋಜಿಸಬೇಕು. ಸಾರ್ವಜನಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಡಿ.ಡಿ.ಪಿ.ಯು. ಮಾರುತಿ, ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಶ್ರೀ ಕೃಷ್ಣ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.