ಹೊಸಪೇಟೆ: ಜಿಲ್ಲೆಯಲ್ಲಿ ಅವೈಜ್ಞಾನಿಕ ರಸ್ತೆ ಮತ್ತು ಕಾಮಗಾರಿಗಳಿಂದ ಅಪಘಾತಗಳ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿವೆ. ಅಪಘಾತ ಸಂಖ್ಯೆಯನ್ನು ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಶ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಸರಣಿ ಅಪಘಾತಗಳು ಸಂಭವಿಸುವ ಬ್ಲ್ಯಾಕ್ ಸ್ಪಾಟ್‌ಗಳನ್ನು ಪೊಲೀಸ್ ಮತ್ತು ಲೋಕೋಪಯೋಗಿ ಇಲಾಖೆ ಜಂಟಿಯಾಗಿ ಗುರುತಿಸಿ ಅಗತ್ಯ ಕ್ರಮ ವಹಿಸಬೇಕು. ಬ್ಲ್ಯಾಕ್ ಸ್ಪಾಟ್ ಗುರುತಿಸಿದ ಜಾಗಗಳಲ್ಲಿ ತಕ್ಷಣವೇ ವೈಜ್ಞಾನಿಕವಾಗಿ ರಸ್ತೆ ಉಬ್ಬುಗಳು, ಸೂಚನಾಫಲಕ, ರಿಫ್ಲೆಕ್ಟರ್‌ಗಳು ಹಾಗೂ ರಾತ್ರಿ ವೇಳೆ ಎಚ್ಚರಿಸುವ ಸೋಲಾರ್ ಬ್ಲಿಂಕರ್ ದೀಪ ಅಳವಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆದ್ದಾರಿ ಬದಿ ಲಾರಿ, ಇತರೆ ಭಾರಿ ವಾಹನಗಳನ್ನು ಅನಧಿಕೃತವಾಗಿ ಪಾರ್ಕಿಂಗ್ ಮಾಡುವುದರಿಂದ ರಾತ್ರಿ ವೇಳೆ ಗರಿಷ್ಠ ಅಪಘಾತ ಸಂಭವಿಸುತ್ತಿವೆ. ಇಂತಹ ವಾಹನಗಳ ವಿರುದ್ಧ ಭಾರಿ ದಂಡ ವಿಧಿಸುವುದರ ಜೊತೆಗೆ ರಸ್ತೆ ಬದಿಯ ದೃಷ್ಟಿ ಅಂಧತ್ವ ಉಂಟುಮಾಡುವ ಅನಧಿಕೃತ ಫ್ಲೆಕ್ಸ್, ಬೋರ್ಡ್‌ಗಳು ಮತ್ತು ಗಿಡಗಂಟಿ ತಕ್ಷಣವೇ ತೆರವುಗೊಳಿಸಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದರು.ಸಾರ್ವಜನಿಕರು ಸಂಚರಿಸುವ ಮಾರ್ಗಗಳಲ್ಲಿ ಅಥವಾ ಶಾಲಾ ಕಾಲೇಜು ಸಮೀಪ ಅಗತ್ಯವಿದ್ದಲ್ಲಿ ಮೇಲ್ಸೇತುವೆ, ಸ್ಕೈವಾಕ್ ನಿರ್ಮಿಸಲು ಸೂಚನೆ ನೀಡಿದ ಅವರು, ರಾಜ್ಯ ಅಥವಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದ ತಕ್ಷಣ ಮೊದಲ ಒಂದು ಗಂಟೆಯ ಅವಧಿ ಅತ್ಯಂತ ಅಮೂಲ್ಯವಾಗಿದೆ. ಹೆದ್ದಾರಿಗಳಲ್ಲಿ 24*7 ಆ್ಯಂಬುಲೆನ್ಸ್ ಸೇವೆ ಲಭ್ಯವಿರಬೇಕು. ಅಪಘಾತದ ಮಾಹಿತಿ ಸಿಕ್ಕ ತಕ್ಷಣ ಸಂತ್ರಸ್ತರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೆಲವೆಡೆ ವಿದ್ಯತ್ ದೀಪಗಳಿಲ್ಲ. ಸಿಸಿ ಕ್ಯಾಮೆರಾ ಅಳವಡಿಸಿರುವುದಿಲ್ಲ ಎಂಬ ಬಗೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ನೀಡಿದರು. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಪ್ರತಿಕ್ರಿಯಿಸಿ ಈಗಾಗಲೇ ಅಗತ್ಯವವಿರುವೆಡೆ ಸಿಸಿ ಕ್ಯಾಮೆರಾ ಅಳವಡಿಸುವ ಕಾರ್ಯ ನಡೆಯುತ್ತಿದೆ. ವಿದ್ಯತ್ ದೀಪಗಳ ಕುರಿತು ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ಸಕರಾತ್ಮಕವಾಗಿ ಸ್ಪಂದಿಸಿದರು.
ಎಸ್ಪಿ ಎಸ್.ಜಾಹ್ನವಿ ಮಾತನಾಡಿ, ವಿವಿಧ ಇಲಾಖೆಗಳ ಜಂಟಿಯಾಗಿ ಅಪಘಾತ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲೆಯಲ್ಲಿ ಒಂದೇ ಸ್ಥಳದಲ್ಲಿ ಒಂದಕ್ಕಿಂತ ಹೆಚ್ಚಾಗಿ ಅದೇ ಸ್ಥಳದಲ್ಲಿ ಅಪಘಾತ ಸಂಭವಿಸಿದ ಪ್ರದೇಶಗಳನ್ನು ಅಪಘಾತ ವಲಯ ಎಂದು ಗುರುತಿಸಲಾಗಿದೆ. ಅಪಘಾತ ಪ್ರಕರಣ ತಪ್ಪಿಸಲು ಕ್ರಮ ಕೈಗೊಳಲಾಗಿದೆ ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಹೇಮರಾಜ್, ಜೂನಿಯರ್ ಇಂಜಿನಿಯರ್ ಮಂಜುನಾಥ್, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು.