ತಾಪಂ ಇಒ ಶ್ರೀಧರ ಚಿನಗುಂಡಿ ಅವರು ತಾಲೂಕಿನ ಶಿರೋಳ ಗ್ರಾಪಂ ವ್ಯಾಪ್ತಿಯ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನರಗುಂದ: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಕರು ಪುನಃ ಶಾಲೆಗೆ ಸೇರಿಸುವ ಅಭಿಯಾನ ಪ್ರಾರಂಭಿಸಬೇಕು ಎಂದು ತಾಪಂ ಇಒ ಶ್ರೀಧರ ಚಿನಗುಂಡಿ ತಿಳಿಸಿದರು.

ತಾಲೂಕಿನ ಶಿರೋಳ ಗ್ರಾಪಂ ವ್ಯಾಪ್ತಿಯ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, ಸರ್ಕಾರಿ ಹಿರಿಯ ಪ್ರೌಢಶಾಲೆಗೆ ಭೇಟಿ ನೀಡಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಹಾಜರಾತಿಯನ್ನು ಪರಿಶೀಲಿಸಿದರು.

ಈ ವೇಳೆ ಐವರು ವಿದ್ಯಾರ್ಥಿಗಳು ದೀರ್ಘಾವಧಿಯಿಂದ ಶಾಲೆಗೆ ಗೈರಾಗಿರುವುದು ತಿಳಿದಿದೆ. ಆದ್ದರಿಂದ ತಕ್ಷಣವೇ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಗೈರುಹಾಜರಾಗಿರುವ ಮಕ್ಕಳನ್ನು ಪುನಃ ಶಾಲೆಗೆ ಸೇರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜತೆಗೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು.

ಇಒ ಅವರ ಸೂಚನೆಗೆ ಸ್ಪಂದಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲೂಕಿನಾದ್ಯಂತ ವಿಶೇಷ ಅಭಿಯಾನ ನಡೆಸಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ದಾಖಲಿಸುವ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದರು.

ಭೇಟಿಯ ವೇಳೆ ಶಾಲೆಯಲ್ಲಿಯೇ ಮಧ್ಯಾಹ್ನದ ಬಿಸಿಯೂಟ ಸವಿದ ಇಒ ಅವರು, ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಅಡುಗೆ ಕೊಠಡಿಗೆ ಭೇಟಿ ನೀಡಿ ಆಹಾರ ಸಾಮಗ್ರಿಗಳ ಸಂಗ್ರಹಣೆ ಮತ್ತು ಶುಚಿತ್ವವನ್ನು ಪರಿಶೀಲಿಸಿ, ಅಡುಗೆ ಸಿಬ್ಬಂದಿಗೆ ಮನೆಯ ಮಕ್ಕಳಿಗೆ ಸಿದ್ಧಪಡಿಸುವ ರೀತಿಯಲ್ಲಿಯೇ ಶಾಲಾ ಮಕ್ಕಳಿಗೂ ಗುಣಮಟ್ಟದ ಆಹಾರವನ್ನು ತಯಾರಿಸಬೇಕು ಎಂದು ಸೂಚಿಸಿದರು.

ಬಳಿಕ ಶಿರೋಳ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಅವರು, ಸಿಬ್ಬಂದಿ ಹಾಜರಾತಿ ಪುಸ್ತಕ ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಶಿರೋಳ ಗ್ರಾಪಂ ಪಿಡಿಒ ಮಲ್ಲಪ್ಪ ವಾಲಿ, ನರೇಗಾ ತಾಂತ್ರಿಕ ಸಂಯೋಜಕ ಹನುಮಂತ ಡಂಬಳ, ತಾಂತ್ರಿಕ ಸಹಾಯಕ ವೀರಯ್ಯ ಶಹಾಪುರ ಹಾಗೂ ಗ್ರಾಪಂ ಸಿಬ್ಬಂದಿ ಇದ್ದರು.