ಕುಡಿವ ನೀರು, ನಿವೇಶನ ಸಮಸ್ಯೆ ನನ್ನ ಗಮನಕ್ಕೆ ತನ್ನಿ

| Published : Feb 16 2024, 01:49 AM IST

ಸಾರಾಂಶ

ರಾಜ್ಯದಲ್ಲಿ ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಆಹ್ವಾನಿಸುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಹಾಗೂ ಇತರೆ ಯೋಜನೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಂದ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸ್ವೀಕರಿಸುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ರಾಜ್ಯದಲ್ಲಿ ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಆಹ್ವಾನಿಸುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಹಾಗೂ ಇತರೆ ಯೋಜನೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಂದ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸ್ವೀಕರಿಸುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.

ನಗರದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಗುರುವಾರ ನಡೆದ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ನಾಲ್ಕು ಇಲಾಖೆಗಳ ವ್ಯಾಪ್ತಿಯಲ್ಲಿನ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿ ಸ್ಥಗಿತ, ನಿವೇಶನ ಸಮಸ್ಯೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಇತರೆ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಅವುಗಳನ್ನು ಪರಿಹರಿಸಲಾಗುವುದು. ಯಾವುದೇ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಿರ್ಲಕ್ಷತನ ವಹಿಸಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೆ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

10ನೇ ತರಗತಿ ಪಾಸಾಗಿ ಹೊರಹೋಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸದ ಆಯ್ಕೆಗಾಗಿ ಎಲ್ಲ ವಿದ್ಯಾರ್ಥಿ ನಿಲಯ, ವಸತಿ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ನಂತರದ ಮುಂದಿನ ವಿದ್ಯಾಭ್ಯಾಸದ ಬಗ್ಗೆ ಇರುವ ಅನುಕೂಲತೆಗಳ ಕುರಿತು ಒಂದು ಚಾರ್ಟ್ ಅನ್ನು ಪ್ರರ್ದಶಿಸಬೇಕು ಎಂದರು.

ರಾಮದುರ್ಗ ತಾಲೂಕಿನ ಬಟಕುರ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ತಾಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆ ಬಗೆಹರಿಸಲು ಕ್ರಮಕೈಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಕಳೆದ ಐದು ವರ್ಷಗಳಲ್ಲಿ ವಸತಿ ಶಾಲೆಗಳಲ್ಲಿ 10ನೇ ತರಗತಿ ಮಾಡಿದ ಪದವಿ ಪೂರ್ಣಗೊಳಿಸಿದವರು ಈಗ ಎಲ್ಲಿದ್ದಾರೆ. ಏನ್ನೂ ಮಾಡುತ್ತಿದ್ದಾರೆ. ಅವರ ಈಗಿನ ಸ್ಥಿತಿಗತಿ ಕುರಿತು ಮಾಹಿತಿ ಕಲೆಹಾಕಲು ಒಂದು ತಂಡ ರಚಿಸಬೇಕು. ಈ ಮಾಹಿತಿಯನ್ನು ಮಾ.31 ರೊಳಗೆ ಸಲ್ಲಿಸುವಂತೆ ನಾಲ್ಕು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಸಂತ ಸೇವಾಲಾಲ್ ಜಯಂತಿ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಲಕ್ಷ್ಮಣ ಬಬಲಿ, ಜಿಲ್ಲಾ ಪರಿಶಿಷ್ಟ ವರ್ಗ ಕಲ್ಯಾಣ ಅಧಿಕಾರಿ ಬಸವರಾಜ ಕುರಿಹುಲಿ , ಹಿಂದುಳಿದ ವರ್ಗ ಕಲ್ಯಾಣಾಧಿಕಾರಿ ಶಿವಪ್ರಿಯಾ ಕೊಡಚೂರ ಮೊದಲಾದವರು ಉಪಸ್ಥಿತರಿದ್ದರು.---15ಬಿಇಎಲ್‌3