ಕನ್ನಡಪ್ರಭ ವಾರ್ತೆ ಬೆಳಗಾವಿ

ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕೆಂದು ಆಗ್ರಹಿಸಿ ಭಾನುವಾರ ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಘಟಕದಿಂದ ಬೃಹತ್ ಪಂಜಿನ ಮೆರವಣಿಗೆ ಪ್ರತಿಭಟನೆ ನಡೆಸಿದರು.ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ನಗರದ ಕಾಂಗ್ರೆಸ್ ಕಚೇರಿಯಿಂದ ರಾಣಿ ಚನ್ನಮ್ಮ ವೃತ್ತದವರೆಗೂ ಬೃಹತ್ ಪಂಜಿನ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ದೇಶದ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ತಳ್ಳಲ್ಪಟ್ಟಿದೆ. ಈ ಹಗರಣದಿಂದಾಗಿ ದೇಶದ ಉನ್ನತ ಪರೀಕ್ಷಾ ವ್ಯವಸ್ಥೆಯ ಮೇಲಿದ್ದ ನಂಬಿಕೆಯೇ ಸಂಪೂರ್ಣವಾಗಿ ಕುಸಿದುಹೋಗಿದೆ ಎಂದು ಪ್ರತಿಭಟನಾಕಾರರು ಗಂಭೀರವಾಗಿ ಆರೋಪಿಸಿದರು.ಬಳಿಕ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಮಾತನಾಡಿ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ ಈ ಹಗರಣದ ನೈತಿಕ ಹೊಣೆಯನ್ನು ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಜೊತೆಗೆ ಈ ಇಡೀ ಹಗರಣದ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಪಾರದರ್ಶಕ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ದ್ರೋಹವಾಗಿದೆ. ಕರ್ನಾಟಕದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಶ್ರಮಪಟ್ಟು ಈ ಪರೀಕ್ಷೆ ಬರೆದಿದ್ದರು. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ತರಬೇತಿ, ಪ್ರಯಾಣ ಸೇರಿದಂತೆ ಸಾಕಷ್ಟು ಖರ್ಚುಗಳನ್ನು ಮಾಡಿದ್ದರು. ಆದರೆ, ಕೇಂದ್ರದ ಒಂದು ನಿರ್ಧಾರ ಇಡೀ ವಿದ್ಯಾರ್ಥಿ ಸಮುದಾಯವನ್ನು ಸಂಕಷ್ಟಕ್ಕೆ ತಳ್ಳಿದೆ. ಪೇಪರ್ ಲೀಕ್ ಪ್ರಕರಣಗಳು ಪ್ರತಿಭಾವಂತ ವಿದ್ಯಾರ್ಥಿಗಳ ಹಿತರಕ್ಷಣೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ. ಹೊಣೆ ಹೊರಬೇಕಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಯುವಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಶಾಸಕರಾದ ಆಸೀಪ್ ಸೇಠ್‌, ಬೂಡಾ ಮಾಜಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್.ಎಂ.ಜೆ, ಸಾಗರ ದಿವಟಗಿ, ಯುವ ಕಾಂಗ್ರೆಸ್ ಮುಖಂಡ ಮೃಣಾಳ ಹೆಬ್ಬಾಳಕರ್, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಸಿದ್ದಿಕ್ ಅಂಕಲಗಿ , ಕಾಂಗ್ರೆಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶಿವಾನಂದ ಮರ್ಯಾಯಿ, ಯಮನರಾಜ ರಬಕವಿ, ಸುದರ್ಶನ ಜಂಟ್ಟೆನವರ, ಆಕಾಶ ನಂದಗಾವಿ ಹಾಗೂ ಮುಂತಾದವರು ಭಾಗವಹಿಸಿದ್ದರು.