ಸಾರ್ವಜನಿಕರು ತಮ್ಮ ಸಣ್ಣಪುಟ್ಟ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೆ ಅಲೆಯುವ ಪರಿಸ್ಥಿತಿ ತಪ್ಪಿಸಿ, ಆಡಳಿತ ವ್ಯವಸ್ಥೆಯನ್ನೇ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಪ್ರಜಾಸೇವೆ’ ಅಭಿಯಾನವನ್ನು ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದರು.
ಕನ್ನಡಪ್ರಭ ವಾರ್ತೆ ಕೊರಟಗೆರೆ
ಸಾರ್ವಜನಿಕರು ತಮ್ಮ ಸಣ್ಣಪುಟ್ಟ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೆ ಅಲೆಯುವ ಪರಿಸ್ಥಿತಿ ತಪ್ಪಿಸಿ, ಆಡಳಿತ ವ್ಯವಸ್ಥೆಯನ್ನೇ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಪ್ರಜಾಸೇವೆ’ ಅಭಿಯಾನವನ್ನು ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದರು.ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಸೇವೆ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಸೇವೆ ಅಭಿಯಾನವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮವಾಗಿದ್ದು, ರಾಜ್ಯಾದ್ಯಂತ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಹಲವು ಬಾರಿ ಅಲೆದಾಡಬೇಕಾದ ಪರಿಸ್ಥಿತಿಯಿದೆ. ಸಣ್ಣ ಕೆಲಸವೂ ಆಗದಿದ್ದಾಗ ಜನರು ನಿರಾಸೆಗೊಳ್ಳುತ್ತಾರೆ. ಇಂತಹ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸರ್ಕಾರವೇ ಜನರ ಬಳಿಗೆ ಹೋಗಬೇಕೆಂಬ ಆಶಯದಿಂದ ಪ್ರಜಾಸೇವೆ ಅಭಿಯಾನವನ್ನು ರೂಪಿಸಲಾಗಿದೆ ಎಂದರು.ಅಭಿಯಾನದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬಹುದು. ಅವುಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಿ, ಸಾಧ್ಯವಾದಷ್ಟು ಅರ್ಜಿಗಳನ್ನು ಅಂದೇ ಸಂಜೆ ವೇಳೆಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಿದ್ದಾರೆ. ಬಾಕಿ ಉಳಿದಿರುವ ಸಾರ್ವಜನಿಕರ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ತಮ್ಮ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ತಮ್ಮ ಜಿಲ್ಲೆಗಳಲ್ಲಿ ಪ್ರಜಾಸೇವೆ ಅಭಿಯಾನ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಸಾವಿರಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರು, ಗುಬ್ಬಿ ಮತ್ತು ಕುಣಿಗಲ್ನಲ್ಲಿ ಕಾರ್ಯಕ್ರಮಗಳು ನಡೆದಿದ್ದು, ಇದೀಗ ಕೊರಟಗೆರೆಯಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ಈ ಅಭಿಯಾನ ನಡೆಯುತ್ತಿದೆ ಎಂದು ತಿಳಿಸಿದರು. ವಿಶ್ವಗುರು ಬಸವಣ್ಣನವರು ‘ನುಡಿದಂತೆ ನಡೆ’ ಎಂದು ಹೇಳಿದ್ದಾರೆ. ಅವರ ತತ್ವದಂತೆ ಚುನಾವಣೆಗೆ ಮುನ್ನ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಹೇಳಿದರು. ಯೋಜನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಲಾಗುತ್ತಿದೆ ಎಂದು ಹೇಳಿದರು.ಕಂದಾಯ ಸಚಿವನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಬಡವರ ಬದುಕಿಗೆ ಯಾವ ರೀತಿಯಲ್ಲಿ ನೆರವಾಗಬಹುದು ಎಂಬುದರ ಕುರಿತು ಯೋಚಿಸಿದೆ. ರಾಜ್ಯದ ಅನೇಕ ಗ್ರಾಮಗಳಲ್ಲಿ ಇಂದಿಗೂ ಬಡ ಕುಟುಂಬಗಳು ಗುಡಿಸಲುಗಳಲ್ಲಿ ವಾಸಿಸುತ್ತಿವೆ. ಅವರಿಗೆ ಶಾಶ್ವತ ಸೂರು ಇಲ್ಲದಿರುವುದು ಕಳವಳಕಾರಿ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಿವೇಶನರಹಿತ ಬಡ ಕುಟುಂಬಗಳಿಗೆ 15 ಲಕ್ಷ ನಿವೇಶನಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಇನ್ನು ಮುಂದೆ 20×30 ಅಡಿ ಅಳತೆಯ ನಿವೇಶನಗಳ ಬದಲಿಗೆ 30×40 ಅಡಿ ಅಳತೆಯ ನಿವೇಶನಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ ಈಗಾಗಲೇ 20 ಸಾವಿರ ನಿವೇಶನಗಳನ್ನು ಸಿದ್ಧಪಡಿಸಲಾಗಿದೆ. ಹಳ್ಳಿಹಳ್ಳಿಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ, ಅರ್ಹ ಬಡ ಕುಟುಂಬಗಳನ್ನು ಗುರುತಿಸಿ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು. ಪ್ರತಿಯೊಂದು ಬಡ ಕುಟುಂಬಕ್ಕೂ ಸ್ವಂತ ನೆಲೆಯ ಭದ್ರತೆ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂದರು.ರೈತರಿಗೆ ಒಂದೇ ದಾಖಲೆಯಲ್ಲಿ ಭೂಮಿಯ ಸಮಗ್ರ ಮಾಹಿತಿ; ನಮೂನೆ 16ಎ ಪಹಣಿ:* ರೈತರು ಪಹಣಿ, ಆಕಾರ್ಬಂದ್, ನಕಾಶೆ ಸೇರಿದಂತೆ ತಮ್ಮ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲು ಹಣ ವೆಚ್ಚ ಮಾಡಿ, ಅರ್ಜಿಗಳನ್ನು ಸಲ್ಲಿಸಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಪರಿಸ್ಥಿತಿಯಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಹೊಸ ಮಾದರಿಯ ‘ನಮೂನೆ 16ಎ’ ಪಹಣಿ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ಹೇಳಿದರು.
ಈ ಹೊಸ ಪಹಣಿಯಲ್ಲಿ ರೈತನ ವಿವರಗಳು, ಬೆಳೆ ಮಾಹಿತಿ, ಆಧಾರ್ ಮಾಹಿತಿ, ಭಾವಚಿತ್ರ ಸೇರಿದಂತೆ ಭೂಮಿಗೆ ಸಂಬಂಧಿಸಿದ ಹಲವು ಮಾಹಿತಿಗಳು ಒಂದೇ ದಾಖಲೆಯಲ್ಲಿ ಲಭ್ಯವಾಗಲಿವೆ. ಇದು ದೇಶದಲ್ಲಿಯೇ ಮೊದಲ ಬಾರಿಗೆ ರೂಪಿಸಲಾಗುತ್ತಿರುವ ವ್ಯವಸ್ಥೆಯಾಗಿದೆ ಎಂದು ತಿಳಿಸಿದರು.ರೈತರಿಗೆ ತಮ್ಮ ಭೂದಾಖಲೆಗಳನ್ನು ಸುಲಭವಾಗಿ ಪಡೆಯಲು ಅನುಕೂಲ ಕಲ್ಪಿಸುವುದು ಹಾಗೂ ಕಂದಾಯ ಇಲಾಖೆಯ ಸೇವೆಗಳನ್ನು ಮತ್ತಷ್ಟು ಸರಳಗೊಳಿಸುವುದು ಈ ವ್ಯವಸ್ಥೆಯ ಉದ್ದೇಶವಾಗಿದೆ ಎಂದರು.ರಾಜ್ಯ ಸರ್ಕಾರ ದಿವಾಳಿಯಾಗಿದೆ, ಸರ್ಕಾರದಲ್ಲಿ ಹಣವಿಲ್ಲ ಎಂದು ವಿರೋಧ ಪಕ್ಷದವರು ನಿರಂತರವಾಗಿ ಟೀಕಿಸುತ್ತಿದ್ದಾರೆ. ಆದರೆ ಸರ್ಕಾರದಲ್ಲಿ ಹಣವಿಲ್ಲದಿದ್ದರೆ ಇಷ್ಟೆಲ್ಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರು.4,500 ಎಲೆಕ್ಟ್ರಿಕ್ ಬಸ್ಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರು.6,000 ಕೋಟಿ ವೆಚ್ಚ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿನ ಯೋಜನೆಗಳಿಗೆ ರು.16 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಕೊರಟಗೆರೆ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ರು.25 ಕೋಟಿ ಅನುದಾನ ಒದಗಿಸಲಾಗಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ, ಜಿಪಂ ಸಿಇಒ ಅಶ್ವಿಜ, ಗ್ಯಾರಂಟಿ ಅಧ್ಯಕ್ಷರು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗಹಿಸಿದ್ದರು.ವಿರೋಧ ಪಕ್ಷದ ಟೀಕೆಗಳಿಗೆ ಒಂದು ಇತಿಮಿತಿ ಇರಬೇಕು. ಇಂತಹ ಟೀಕೆಗಳಿಗೆ ನಾವು ಜಗ್ಗುವುದಿಲ್ಲ. ನೀಡಿದ ಭರವಸೆಗಳನ್ನು ಈಡೇರಿಸುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುತ್ತೇವೆ. 2028ರ ಚುನಾವಣೆಯಲ್ಲಿಯೂ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದು, ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
