ಸಾರಾಂಶ
ಜಿಲ್ಲಾಡಳಿತದ ಮುಂದೆ ಪ್ರತಿಭಟನೆ । ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಕೆ । ಸಂತ್ರಸ್ತೆಯರಿಗೆ ನ್ಯಾಯ ಕೊಡಿಸಿ
ಕನ್ನಡಪ್ರಭ ವಾರ್ತೆ ಹಾಸನಪೆನ್ ಡ್ರೈವ್ ನಲ್ಲಿ ಲಭ್ಯವಾಗಿರುವಂತೆ ಸಾವಿರಾರು ಮಹಿಳೆಯರ ಮೇಲೆ ನಡೆದಿದೆ ಎನ್ನಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ಅವರನ್ನು ಬಂಧಿಸಿ ಸಿಬಿಐ ಅಥವಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಂಡು, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ಮತ್ತು ರಕ್ಷಣೆ ನೀಡುವಂತೆ ಬಿಎಸ್ಪಿ ಪಕ್ಷದಿಂದ ಗುರುವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಬಹುಜನ ಸಮಾಜ ಪಕ್ಷದ ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್ ಮಾತನಾಡಿ, ‘ಕಳೆದೆ ಕೆಲವು ದಿನಗಳಿಂದ ಹಾಸನದಲ್ಲಿ ಲಭ್ಯವಾಗಿರುವ ಪೆನ್‌ಡ್ರೈವ್‌ನಲ್ಲಿರುವ ದಾಖಲೆಗಳ ಅನ್ವಯ ಹಾಗೂ ವಿವಿಧ ಮಾದ್ಯಮಗಳಲ್ಲಿ ಬಿತ್ತರವಾಗಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ಚಿತ್ರಗಳು ಮತ್ತು ವಿಡಿಯೋ ದೃಶ್ಯಗಳು ಮಾದ್ಯಮಗಳಲ್ಲಿ ಬಿತ್ತರವಾಗುತ್ತಿವೆ. ಆ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ವಾಟ್ಸಾಪ್‌ಗಳಲ್ಲಿ ಹರಿದಾಡುತ್ತಿವೆ. ಈ ಚಿತ್ರಗಳು ಮತ್ತು ವಿಡಿಯೋಗಳಿಂದಾಗಿ ಸಂತ್ರಸ್ತ ಮಹಿಳೆಯರ ಖಾಸಗಿ ಮತ್ತು ಕೌಟುಂಬಿಕ ಬದುಕು ಛಿದ್ರವಾಗಿದೆ’ ಎಂದು ಹೇಳಿದರು.‘ಯಾವ ಕ್ಷಣದಲ್ಲಿ ಯಾವಾಗ ಮತ್ತೊಂದು ಪೆನ್‌ಡ್ರೈವ್ ಹೊರ ಬರುತ್ತದೆಯೋ, ಅದರಲ್ಲಿ ಯಾವ ಮಹಿಳೆಯ ಖಾಸಗಿ ಪೋಟೋಗಳು ಮತ್ತು ದೃಶ್ಯಗಳು ಬಿತ್ತರಗೊಳ್ಳಲಿವೆಯೋ ಎಂಬ ಆತಂಕ ಮತ್ತು ಕುತೂಹಲ ಎಲ್ಲೆಡೆ ಹರಡಿದೆ. ಇದೊಂದು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಇಡೀ ದೇಶವನ್ನು ಆಳಿದ ಮಾಜಿ ಪ್ರಧಾನಿಗಳ ಕುಟುಂಬದಲ್ಲಿ ಪ್ರಜೆಗಳು ನಡೆದಿರುವುದು ಜಾಗತಿಕ ಮಟ್ಟದಲ್ಲಿ ಇಡೀ ದೇಶವೇ ತಲೆತಗ್ಗಿಸುವಂತಹ ನಾಚಿಕೆಗೇಡಿನ ಸಂಗತಿಯಾಗಿದೆ’ ಎಂದು ದೂರಿದರು.
‘ಮಹಿಳೆಯರನ್ನು ಈ ರೀತಿ ಕಾಮತೃಷೆಗೆ ಬಳಸಿಕೊಳ್ಳಲು ಪ್ರಜ್ವಲ್ ರೇವಣ್ಣ ತನಗಿರುವ ರಾಜಕೀಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ ಎನ್ನುವುದೂ ಸ್ಪಷ್ಟವಾಗಿದೆ. ಇಂತಹ ವಿಕೃತ ಮನಸ್ಸಿನ ವ್ಯಕ್ತಿ ಜನಪ್ರತಿನಿಧಿಯಾಗಿ ಇರುವುದಿರಲಿ ನಾಗರಿಕ ಸಮಾಜದಲ್ಲಿ ಮುಕ್ತವಾಗಿ ಓಡಾಡಿಕೊಂಡಿರುವುದು ಬಹಳ ಅಪಾಯಕಾರಿಯಾದ ಮತ್ತು ಆತಂಕಕಾರಿಯಾದ ಸಂಗತಿಯಾಗಿದೆ. ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ.ರೇವಣ್ಣರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸುವ ಮೂಲಕ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.‘ಈ ಕುರಿತು ಇಷ್ಟು ದಿನ ಮೌನವಹಿದ್ದ ರಾಜ್ಯ ಸರ್ಕಾರ ಈಗ ಎಚ್ಚೆತ್ತುಕೊಂಡು ಇಡೀ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಆದರೆ ಎಸ್‌ಐಟಿಯಿಂದ ಈ ಪ್ರಕರಣವನ್ನು ಭೇದಿಸಲು ಸಾಧ್ಯವಿಲ್ಲ ಎಂದು ಜನ ಸಾಮಾನ್ಯರು ಮಾತನಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಇಂತಹ ಗಂಭೀರ ಸ್ವರೂಪದ ಪ್ರಕರಣವನ್ನು ಸಿಬಿಐಗೆ ಅಥವಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ತಂಡಕ್ಕೆ ನೀಡಬೇಕು’ ಎಂದು ಕೋರಿದರು.
‘ಪೆನ್‌ಡ್ರೈವ್ ಲೈಂಗಿಕ ದೌರ್ಜನ್ಯದಲ್ಲಿ ಸಂತ್ರಸ್ತರಾಗಿರುವ ಮಹಿಳೆಯ ಗೌಪ್ಯತೆಯನ್ನು ಕಾಪಾಡಬೇಕು. ಸಂತ್ರಸ್ತ ಮಹಿಳೆಯರಿಗಾಗಿ ಪ್ರತ್ಯೇಕ ಕೌನ್ಸೆಲಿಂಗ್ ಕೇಂದ್ರಗಳನ್ನು ತೆರೆಯಬೇಕು. ಸಂತ್ರಸ್ಥ ಮಹಿಳೆಯರು ಸ್ವಯಂ ಪ್ರೇರಿತರಾಗಿ ಮತ್ತು ನಿರ್ಭೀತಿಯಿಂದ ತಮ್ಮ ಮೇಲೆ ನಡೆಯಲಾರುವ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ದಾಖಲಿಸಲು ಸಾಧ್ಯವಾಗುವಂತೆ ಹಾಸನದಲ್ಲಿ ಹಾಗೂ ಬೆಂಗಳೂರಿನಲ್ಲಿ ಪ್ರತ್ಯೇಕವಾದ ದೂರು ಕೇಂದ್ರಗಳನ್ನು ಸ್ಥಾಪಿಸಬೇಕು. ದೂರು ನೀಡಿದವರ ಗೌಪ್ಯತೆ ಕಾಪಾಡಬೇಕು ಹಾಗೂ ದೂರು ದಾಖಲಿಸಲು ಬರುವ ಸಂತ್ರಸ್ಥ ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸಬೇಕು’ ಎಂದು ಹೇಳಿದರು.ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಅತ್ನಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಮ್ಮ, ಜಿಲ್ಲಾ ಸಂಯೋಜಕ ಮಲ್ಲಯ್ಯ, ಜಿಲ್ಲಾ ಉಪಾಧ್ಯಕ್ಷ ಲೋಹಿತ್ ಕಡೇಗರ್ಜೇ, ಕಿರಣ್ ಕುಮಾರ್, ಸಿ.ಜಿ.ಸೋಮಶೇಖರ್ ರೂಪ ಮೋಹನ್, ಬಿ.ವಿ.ಸುರೇಂದ್ರ, ರಾಜು, ಸಿದ್ದಲಿಂಗಯ್ಯ, ರಾಜು ಇದ್ದರು.
ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಿಎಸ್ಪಿ ಕಾರ್ಯಕರ್ತರು.