ಬಜೆಟ್ ಸಿದ್ಧತೆಗಾಗಿ ಇಲಾಖಾವಾರು ಪೂರ್ವಸಿದ್ಧತಾ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ 9 ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೊಂದಿಗೆ ಸಭೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬಜೆಟ್ ಸಿದ್ಧತೆಗಾಗಿ ಇಲಾಖಾವಾರು ಪೂರ್ವಸಿದ್ಧತಾ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ 9 ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೊಂದಿಗೆ ಸಭೆ ನಡೆಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಗುರುವಾರದಿಂದ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ. ರೇಸ್‌ಕೋರ್ಸ್ ರಸ್ತೆಯಲ್ಲಿನ ಶಕ್ತಿ ಭವನದಲ್ಲಿ ಸರಣಿ ಸಭೆ ನಡೆಸುತ್ತಿದ್ದಾರೆ. ಸಭೆ ಆರಂಭದ ಮೊದಲ ದಿನ ಗುರುವಾರ 10 ಇಲಾಖೆಗಳು ಹಾಗೂ ಶುಕ್ರವಾರ 9 ಇಲಾಖೆಗಳೊಂದಿಗೆ ಸಭೆ ನಡೆಸಿ, ಬಜೆಟ್ ಬೇಡಿಕೆ ಪಡೆದಿದ್ದರು. ಶನಿವಾರ 9 ಇಲಾಖೆಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ 2026-27ನೇ ಸಾಲಿಗೆ ಇಲಾಖೆಯ ಬೇಡಿಕೆಗಳು, ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿರುವ ಯೋಜನೆಗಳು, ಅಗತ್ಯ ಅನುದಾನದ ವಿವರ ಪಡೆದರು. ಜತೆಗೆ, 2025-26ನೇ ಸಾಲಿನ ಬಜೆಟ್ ಅನುಷ್ಠಾನ ಕುರಿತಂತೆಯೂ ಅಂಕಿ-ಅಂಶ ಸಹಿತ ಮಾಹಿತಿ ಪಡೆದರು.
ಶನಿವಾರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶು ಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ಬಜೆಟ್ ಬೇಡಿಕೆಗಳ ಪ್ರಸ್ತಾವನೆ ಸಲ್ಲಿಸಿದರು.ಅದರೊಂದಿಗೆ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ನಡೆಸಿದರು. ಈ ವೇಳೆ ರಾಜ್ಯದ ಬಜೆಟ್ ಅನುಷ್ಠಾನ ಮತ್ತು ಬೇಡಿಕೆಗಳ ಕುರಿತು ಚರ್ಚಿಸಿದರು. ಈ ವೇಳೆ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್, ಮುಖ್ಯಮಂತ್ರಿ ಅವರ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿ ಇತರರಿದ್ದರು.