ಸಾರಾಂಶ
ತುಮಕೂರಿನ ಬುಗುಡನಹಳ್ಳಿ ವೀರಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ ಮುರಳೀಧರ ಹಾಲಪ್ಪ
ಕನ್ನಡಪ್ರಭ ವಾರ್ತೆ, ತುಮಕೂರು
ಅಯೋಧ್ಯೆಯಲ್ಲಿ ಸೋಮವಾರ ನಡೆದ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ತುಮಕೂರು ಗ್ರಾಮಾಂತರದ ಬೆಳ್ಳಾವಿ ಹೋಬಳಿ ಬುಗುಡನಹಳ್ಳಿ ಗ್ರಾಮದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ದೇವರ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಸಮುದಾಯ ಭವನ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಶ್ರೀರಾಮ ಮತ್ತು ಶ್ರೀ ವೀರಾಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಸಮುದಾಯ ಭವನಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ತುಮಕೂರು ನಗರ ಹಾಗೂ ಗ್ರಾಮಾಂತರದ ಸಹಸ್ರಾರು ಮಂದಿ ಶುಭ ಕಾರ್ಯಗಳನ್ನು ಮಾಡಿಕೊಳ್ಳಲು ಅನುಕೂಲವಾಗುವಂತೆ ಶ್ರೀ ವೀರಾಂಜನೇಯ ಸ್ವಾಮಿ ಸನ್ನಿಧಾನದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷರಾದ ನರಸಿಂಹಯ್ಯನವರ ನೇತೃತ್ವದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದರು.ಕೆಪಿಸಿಸಿ ಒಬಿಸಿ ಘಟಕದ ಉಪಾಧ್ಯಕ್ಷ ರೇವಣ್ಣ ಸಿದ್ದಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ. ಶ್ರೀನಿವಾಸ್, ದೇವಸ್ಥಾನದ ಮುಖ್ಯ ಸೇವಾಕರ್ತ ಸಿ.ಬಿ. ನರಸಿಂಹಯ್ಯ ಮಾತನಾಡಿದರು. ಸಮಾರಂಭದಲ್ಲಿ ಟೂಡಾ ಮಾಜಿ ಅಧ್ಯಕ್ಷ ಸಿದ್ದಲಿಂಗೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಶಿವಾಜಿ, ತುಮಕೂರು ಗ್ರಾಮಾಂತರ ಬ್ಲಾಕ್ ಪ್ರಧಾನ ಕಾರ್ಯದರ್ಶಿ ದಯಾನಂದ್, ಗ್ರಾಪಂ ಅಧ್ಯಕ್ಷೆ ರೇಖಾಶಿವರಾಜು, ಗ್ರಾಪಂ ಸದಸ್ಯ ಪರಮೇಶ್, ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಗ್ರಾಪಂ ಮಾಜಿ ಸದಸ್ಯ ಲಕ್ಷ್ಮೀನಾರಾಯಣ, ಮುಖಂಡರಾದ ನರಸೀಯಪ್ಪ, ಸಿ.ಬಿ.ಬಾಬು ಸೇರಿದಂತೆ ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.