ಮಾದಕ ವಸ್ತುಗಳ ಬಳಕೆಯಿಂದ ದೂರವಿದ್ದು, ಉತ್ತಮ ಶಿಕ್ಷಣದ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು.
ಮಾದಕ ವಸ್ತು ಮುಕ್ತ ಭಾರತಕ್ಕಾಗಿ ಜಾಗೃತಿ ಕಾರ್ಯಕ್ರಮ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಮುಂಡಗೋಡಮಾದಕ ವಸ್ತುಗಳ ಬಳಕೆಯಿಂದ ದೂರವಿದ್ದು, ಉತ್ತಮ ಶಿಕ್ಷಣದ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮುಂಡಗೋಡ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಎಚ್.ಎಸ್. ಶಿವರಾಜು ಹೇಳಿದರು.
ಶನಿವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ಅಭಿಯೋಜನಾ ಇಲಾಖೆ, ವಕೀಲರ ಸಂಘ, ಮುಂಡಗೋಡ, ಸಮಾಜ, ಆರೋಗ್ಯ, ಪೊಲೀಸ್ ಇಲಾಖೆ, ಮುಂಡಗೋಡ ಹಾಗೂ ಮುರಾರ್ಜಿ ದೇಸಾಯಿ ವಸತಿ ಶಾಲೆ, ಕರಗಿನಕೊಪ್ಪ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಭಾಂಗಣದಲ್ಲಿ ಮಾದಕ ವಸ್ತು ಜಾಗೃತಿ ಹಾಗೂ ಮಾದಕ ವಸ್ತು ಮುಕ್ತ ಭಾರತಕ್ಕಾಗಿ ಸ್ವಾಸ್ಥ್ಯ ಸಂಚರಣೆ ಯೋಜನೆ–೨೦೨೫ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಕ್ಕಳು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುವುದರಿಂದ ಉಂಟಾಗುವ ಆರೋಗ್ಯ, ಮಾನಸಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ದುಷ್ಪರಿಣಾಮಗಳ ಕುರಿತು ಅವರು ಸವಿಸ್ತಾರವಾಗಿ ತಿಳಿಸಿದ ಅವರು, ವಿದ್ಯಾರ್ಥಿಗಳು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೆ, ತಮ್ಮ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಿ, ತಮ್ಮ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಪ್ರತಿಯೊಬ್ಬ ನಾಗರಿಕನು ತನ್ನ ಹಕ್ಕುಗಳನ್ನು ಅರಿತುಕೊಳ್ಳುವುದರ ಜೊತೆಗೆ ಸಂವಿಧಾನಬದ್ಧ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಪಾಲಿಸಬೇಕು. ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಅಥವಾ ಮಾದಕ ವಸ್ತುಗಳ ಬಳಕೆ/ಮಾರಾಟ ಕಂಡುಬಂದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಯಾವುದೇ ಭಯವಿಲ್ಲದೆ ತಾಲ್ಲೂಕು ಕಾನೂನು ಸೇವಾ ಸಮಿತಿಯನ್ನು ನೇರವಾಗಿ ಸಂಪರ್ಕಿಸಿ ದೂರು ಅಥವಾ ಮಾಹಿತಿ ನೀಡಬಹುದು ಎಂದು ತಿಳಿಸಿದರು.ತದನಂತರ ಕಾನೂನು ಸೇವಾ ಪ್ರಾಧಿಕಾರದ ಧ್ಯೇಯೋದ್ದೇಶಗಳು, ಉಚಿತ ಕಾನೂನು ನೆರವು ಹಾಗೂ ಸಮಾಜದ ದುರ್ಬಲ ವರ್ಗಗಳಿಗೆ ಕಾನೂನು ಸೇವಾ ಪ್ರಾಧಿಕಾರಗಳ ಮೂಲಕ ದೊರೆಯುವ ಕಾನೂನು ಸಹಾಯದ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್ ಪವಾರ್ ಅಧ್ಯಕ್ಷತೆ ವಹಿಸಿದ್ದರು. ಆರಕ್ಷಕ ವೃತ್ತ ನಿರೀಕ್ಷಕ ರಮೇಶ್ ಹಾನಾಪುರ, ಆಡಳಿತ ವೈದ್ಯಾಧಿಕಾರಿ ಡಾ. ಸ್ವರೂಪರಾಣಿ ಪಾಟೀಲ್, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಈಶ್ವರ ಎಲ್., ನ್ಯಾಯವಾದಿ ಎನ್.ಎ. ನಿಂಬಾಯಿ, ಸಂಗಮೆಶ ಕೊಳ್ಳಾನವರ್, ರಾಜು ಹಂಚಿನಮನಿ, ವಿನಾಯಕ್ ವಸಂತ ರಾಯ್ಕರ್ ಮುಂತಾದವರಿದ್ದರು. ಕಾರ್ಯಕ್ರಮದ ಉಪನ್ಯಾಸಕಿ ಶಿಲ್ಪಾ ವಿ. ಪ್ರಭು ನಿರೂಪಿಸಿದರು.