ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ಆಶ್ರಯ ತಾಣ ನಿರ್ಮಿಸಲು ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರತ್ಯೇಕ ಜಾಗ ಗುರುತಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.

ಚಿತ್ರದುರ್ಗ: ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ಆಶ್ರಯ ತಾಣ ನಿರ್ಮಿಸಲು ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರತ್ಯೇಕ ಜಾಗ ಗುರುತಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿರುವ ಆದೇಶಗಳ ಅನುಷ್ಠಾನ ಹಾಗೂ ಜಿಲ್ಲಾ ಪ್ರಾಣಿ ಕಲ್ಯಾಣ ಮಂಡಳಿ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೀದಿ ನಾಯಿಗಳ ಹಾವಳಿ ತಡೆಗಟ್ಟಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಸರ್ವೋಚ್ಛ ನ್ಯಾಯಾಲಯ ರಚಿಸಿದೆ. ಇದರ ಅನುಸಾರ ಸಮಿತಿಯ ಸದಸ್ಯ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ತಪ್ಪದೇ ನಿರ್ವಹಿಸಬೇಕು. ಮುಖ್ಯವಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಬೀದಿ ನಾಯಿಗಳ ಸಂತಾನಹರಣ ಹಾಗೂ ರೇಬೀಸ್ ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಕೈಗೊಳ್ಳಬೇಕು. ಕೇಂದ್ರ ಸರ್ಕಾರ 2023ರಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ನಿಯಮಗಳು ರೂಪಿಸಿದೆ. ಶಸ್ತ್ರಚಿಕಿತ್ಸಾ ಕೊಠಡಿ, ಶಸ್ತ್ರಚಿಕಿತ್ಸೆ ನಂತರದ ಪಾಲನಾ ಕೊಠಡಿ, ಪ್ರತ್ಯೇಕಿಸುವ ಕೊಠಡಿ ಹಾಗೂ ನಾಯಿಗಳನ್ನು ಸಾಗಾಟ ಮಾಡಲು ವಾಹನ ಹಾಗೂ ಕಚೇರಿ ಕೊಠಡಿಗಳು ಇದರ ಭಾಗವಾಗಿರಬೇಕು. ಇಲ್ಲಿ ಬೀದಿ, ಅನಾಥ, ಗಾಯಗೊಂಡ ನಾಯಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ಅವರು ಸೂಚಿಸಿದರು.

ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳನ್ನು ಹಿಡಿಯುವುದಕ್ಕಾಗಿ ಒಂದು ಕೋಶವನ್ನು ಸ್ಥಾಪನೆ ಮಾಡಬೇಕು. ಪ್ರತಿ 3 ವರ್ಷಗಳಿಗೊಮ್ಮೆ ಬೀದಿ ನಾಯಿಗಳ ಗಣತಿ ಮಾಡಬೇಕು. ಪ್ರತಿ ವಾರ್ಡ್‌ಗಳಲ್ಲಿ 2 ಕಡೆ ಬೀದಿ ನಾಯಿಗಳಿಗೆ ಆಹಾರ ಒದಗಿಸಲು ಸ್ಥಳಗಳನ್ನು ನಿಗದಿಪಡಿಸಬೇಕು. ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳು, ರೈಲು ಬಸ್ ನಿಲ್ದಾಣಗಳು, ಕ್ರೀಡಾಂಗಣಗಳು, ಆಸ್ಪತ್ರೆಗಳ ಮುಖ್ಯಸ್ಥರಿಗೆ ನೋಟಿಸ್ ನೀಡಿ ಅಲ್ಲಿ ವಾಸವಾಗಿರುವ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು. ಈ ಸಂಸ್ಥೆಗಳಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಿಕೊಂಡು ನಿಯಮಿತವಾಗಿ ಬೀದಿ ನಾಯಿಗಳ ಕುರಿತು ರೈಲು, ಬಸ್ ಹಾಗೂ ಶಾಲಾ ಕಾಲೇಜುಗಳ ಆವರಣದಲ್ಲಿ ತಪಾಸಣೆ ನಡೆಸಬೇಕು. ಇವುಗಳ ಸುತ್ತ ಬೇಲಿ ಹಾಗೂ ಕಾಂಪೌಡ್‍ಗಳನ್ನು ನಿರ್ಮಿಸಲು ಸೂಚಿಸಬೇಕು ಎಂದರು.

ಸರ್ಕಾರಿ ಆಸ್ಪತ್ರೆಗಳು ಕಡ್ಡಾಯವಾಗಿ ಎ.ಆರ್.ವಿ ಹಾಗೂ ಇಮ್ಯೂನೋಗ್ಲೋಬಿನ್ಸ್ ಗಳನ್ನು ಸಂಗ್ರಹಿಸಿ ಇರಿಸಿಕೊಳ್ಳಬೇಕು. ಪ್ರತಿ ಶಾಲೆಗಳಲ್ಲಿ ರೇಬೀಸ್ ರೋಗದ ಅರಿವನ್ನು ಮಕ್ಕಳಲ್ಲಿ ಮೂಡಿಸಬೇಕು. ಮಕ್ಕಳಿಗೆ ನಾಯಿ ಕಡಿತವಾದಲ್ಲಿ ಚಿಕಿತ್ಸೆಗೆ ಪ್ರಥಮ ಚಿಕಿತ್ಸಾ ಔಷಧಗಳನ್ನು ಇಟ್ಟುಕೊಳ್ಳಬೇಕು ಎಂದು ಸೂಚಿಸಿದರು.

ಕ್ರೀಡಾ ಸಂಕೀರ್ಣಗಳಲ್ಲಿ ಸೆಕ್ಯೂರಿಟಿ ಸಿಬ್ಬಂದಿಯನ್ನು ನಿಯೋಜಿಸಬೇಕು. ಪ್ರತಿ ಇಲಾಖೆಗಳು ಬೀದಿ ನಾಯಿಗಳ ಹಾವಳಿ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ನಿಗದಿತ ಅವಧಿಯೊಳಗೆ ಸರ್ವೋಚ್ಛ ನ್ಯಾಯಾಲಯಕ್ಕೆ ಅನುಪಾಲನ ವರದಿ ಸಲ್ಲಿಸುವಂತೆ ನಿರ್ದೇಶಿಸಿದರು.

ಸಭೆಯಲ್ಲಿ ಗೋಶಾಲೆ ನಿರ್ವಹಣೆ ಹಾಗೂ ಮೇವು ಖರೀದಿ ಹಾಗೂ ಸಿಬ್ಬಂದಿಗಳ ವೇತನ ಪಾವತಿ ಕುರಿತು ಅನುದಾನ ಬಳಕೆಗೆ ಅನುಮೋದನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಡಿವೈಎಸ್‍ಪಿ ಪಿ.ಕೆ.ದಿನಕರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಎನ್.ಕುಮಾರ್, ನಗರಸಭೆ ಪೌರಾಯುಕ್ತೆ ಲಕ್ಷ್ಮಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ 1,2 ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಬಿಟಿ ಕುಮಾರಸ್ವಾಮಿ ಮಾತನಾಡಿದರು.