ಅಂ.ರಾ.ವಿಮಾನ ನಿಲ್ದಾಣ ನಿರ್ಮಿಸಿ

| Published : Dec 03 2024, 12:31 AM IST

ಸಾರಾಂಶ

ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ, ತುಮಕೂರುರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಭೌತಿಕ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಇದರಿಂದ ರಾಜ್ಯದ 24 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದರು.ತುಮಕೂರು ಜಿಲ್ಲೆಯು ಅಭಿವೃದ್ಧಿಯ ಕಡೆ ದಾಪುಗಾಲು ಇಡುತ್ತಿದೆ. ಜಿಲ್ಲೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಘಟಕವನ್ನು ಸ್ಥಾಪಿಸಲು 20 ಸಾವಿರ ಎಕರೆ ಭೂಮಿಯನ್ನು ನೀಡಲಾಗಿದೆ. ಜಿಲ್ಲೆಗೆ ಮೆಟ್ರೋ ರೈಲು ಯೋಜನೆ ತರಲು ಮುಖ್ಯಮಂತ್ರಿಯವರನ್ನು ಕೇಳಿಕೊಂಡಾಗ, ಅದಕ್ಕೆ ಒಪ್ಪಿ ಕಾರ್ಯಕ್ರಮದ ವಿಸ್ತೃತ ಯೋಜನಾ ವರದಿ ತಯಾರಿಸಲು ಸೂಚಿಸಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿರುವುದರಿಂದ ಮುಂದೊಂದು ದಿನ ಜಿಲ್ಲೆಯು ವಿಶ್ವದ ಭೂಪಟದಲ್ಲಿ ಕಾಣಿಸಿಕೊಳ್ಳಲಿದೆ ಎಂದು ತಿಳಿಸಿದರು. ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳೊಂದಿಗೆ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸಲು ಶ್ರಮಿಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿ ಜನರ ಆಶೋತ್ತರಗಳನ್ನು ಈಡೇರಿಸಲಾಗಿದೆ ಎಂದರು.ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳಡಿ ಅನ್ನಭಾಗ್ಯ ಯೋಜನೆಯಿಂದ ಜಿಲ್ಲೆಯಲ್ಲಿ 22 ಲಕ್ಷ ಕುಟುಂಬಗಳಿಗೆ ಅನುಕೂಲಕರವಾಗಿದ್ದು, ಇದಕ್ಕಾಗಿ 474ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಅದೇ ರೀತಿ ಶಕ್ತಿ ಯೋಜನೆಯಡಿ ಜಿಲ್ಲೆಯ 10 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 302 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ಮಾಹೆ 2 ಸಾವಿರ ರು. ಗಳಂತೆ 1673ಕೋಟಿ ರು. ಜಮೆ ಮಾಡಲಾಗಿದ್ದು, 6 ಲಕ್ಷ ಫಲಾನುಭವಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ಗಳಿಗಿಂತ ಕಡಿಮೆ ಉಪಯೋಗಿಸುವ ಗೃಹ ಬಳಕೆದಾರರಿಗೆ ಉಚಿತ ವಿದ್ಯುತ್ ಒದಗಿಸಲು 284 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು. 7.74 ಲಕ್ಷ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡ 4924 ನಿರುದ್ಯೋಗಿಗಳಿಗೆ 8.42 ಕೋಟಿ ರು. ನಿರುದ್ಯೋಗಿ ಭತ್ಯೆಯನ್ನು ಡಿಬಿಟಿ ಮೂಲಕ ಜಮೆ ಮಾಡಲಾಗಿದೆ. ಪಂಚ ಗ್ಯಾರಂಟಿಗಳಿಗಾಗಿ ಇದುವರೆಗೆ ರಾಜ್ಯದಲ್ಲಿ 2742ಕೋಟಿ ರು. ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ನಗರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೆಲವು ವಾರ್ಡ್ ಗಳನ್ನು ಮಾತ್ರ ಅಭಿವೃದ್ಧಿಪಡಿಸಲಾಗಿದ್ದು, ಉಳಿದ ವಾರ್ಡುಗಳನ್ನು ಅಭಿವೃದ್ಧಿಪಡಿಸಲು 500 ಕೋಟಿ ರೂ.ಗಳ ಅನುದಾನವನ್ನು ಮಂಜೂರು ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರುಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಗೊಲ್ಲರಹಟ್ಟಿ, ಲಂಬಾಣಿತಾಂಡ, ಕಾಲೋನಿ ಸೇರಿದಂತೆ ದಾಖಲೆರಹಿತ ಜನವಸತಿ ಪ್ರದೇಶ ಗಳಲ್ಲಿ ವಾಸಿಸುವ ದುರ್ಬಲ ಸಮುದಾಯಗಳನ್ನು ಮುಖ್ಯ ವಾಹಿನಿಗೆ ತರಲು 2 ಸಾವಿರ ಹಕ್ಕು ಪತ್ರಗಳನ್ನು ಈ ಕಾರ್ಯಕ್ರಮದ ಮೂಲಕ ವಿತರಿಸಲಾಗಿದೆ. ಜಿಲ್ಲೆಯಲ್ಲಿ 522 ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಗುರುತಿಸಿ, ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು 520 ಪ್ರಾಥಮಿಕ ಹಾಗೂ 450 ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಜಿಲ್ಲೆಯ ರೈತರ, ಬಡವರ, ದೀನದಲಿತರ ಅಭ್ಯುದಯಕ್ಕಾಗಿ ಏರ್ಪಡಿಸಿರುವ ಜಿಲ್ಲೆಯ ಈ ಕಾರ್ಯಕ್ರಮ ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ ಎಂದರು.ಬಡವರ ಹಸಿವನ್ನು ನೀಗಿಸುವ ಮನಸ್ಥಿತಿ ನಮ್ಮ ಸರ್ಕಾರಕ್ಕಿದೆ. ಬಡವರ ಪರವಾಗಿರುವ ಈ ಸರ್ಕಾರ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಸರ್ಕಾರ ನಡೆಸಲು ಸಾಧ್ಯವಿಲ್ಲವೆಂಬ ಟೀಕಾಕಾರರ ಮಾತುಗಳಿಗೆ ಬೀಗ ಹಾಕಿದಂತಾಗಿದೆ ಎಂದು ತಿಳಿಸಿದರು. ಯಾವುದೇ ಸರ್ಕಾರ ಇಂತಹ ಆಡಳಿತ ನೀಡಿಲ್ಲ. ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಇಂತಹ ಕಾರ್ಯಕ್ರಮ ಆಯೋಜಿಸುವ ಮೂಲಕ ಟೀಕಾಕಾರರಿಗೆ ಉತ್ತರ ನೀಡುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಶ್ರೀನಿವಾಸ್, ಶಾಸಕರಾದ ಜಿ.ಬಿ.ಜ್ಯೋತಿಗಣೆಶ್, ಬಿ.ಸುರೇಶ್‌ಗೌಡ, ಎಚ್.ವಿ.ವೆಂಕಟೇಶ್, ಕೆ.ಷಡಕ್ಷರಿ, ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಡಿ.ಟಿ.ಶ್ರೀನಿವಾಸ್, ಸಿ.ಬಿ. ಸುರೇಶ್ ಬಾಬು, ಆರ್.ರಾಜೇಂದ್ರ, ಚಿದಾನಂದ ಎಂ.ಗೌಡ, ಮಾಜಿ ಕೇಂದ್ರ ವಲಯ ಐಜಿಪಿ ಲಾಭೂ ರಾಮ್ ಹಾಗೂ ಕೃಷಿ ಆಯುಕ್ತ ವೈ.ಎಸ್.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಅಧ್ಯಕ್ಷ ಚಂದ್ರಶೇಖರ್, ಸರ್ಕಾರದ ಉನ್ನತ ಅಧಿಕಾರಿಗಳು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಸೇರಿದಂತೆ ಮತ್ತಿತರ ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.