ಸಾರಾಂಶ
ಕನ್ನಡಪ್ರಭ ವಾರ್ತೆ, ಭದ್ರಾವತಿ
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಶೌಚಾಲಯ ಹಾಗೂ ಶಾಲಾ ಸ್ವಚ್ಛತೆಗಾಗಿ ಸ್ವಚ್ಛತಾ ಸಿಬ್ಬಂದಿ ನೇಮಿಸುವ ಮೂಲಕ ಶಿಕ್ಷಕರಿಗೆ ಆಗುತ್ತಿರುವ ಒತ್ತಡ ಕಡಿಮೆಗೊಳಿಸುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಲವಾರು ವರ್ಷಗಳಿಂದ ಶೌಚಾಲಯ ಮತ್ತು ಶಾಲಾ ಸ್ವಚ್ಛತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಿಬ್ಬಂದಿ ಇಲ್ಲ. ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಗಾಗಿ ಮಕ್ಕಳನ್ನು ಬಳಸುತ್ತಿದ್ದಾರೆ ಎಂದು ಕೆಲವು ದೂರುಗಳು ಕಂಡುಬಂದಿವೆ. ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರನ್ನು ಅಮಾನತು ಮತ್ತು ಪೊಲೀಸರು ಪ್ರಕರಣ ದಾಖಲಿಸುತ್ತಿರುವುದು ಬೆಳಕಿಗೆ ಬಂದಿದೆ. ಇದರಿಂದ ಗೊಂದಲಮಯ ವಾತಾವರಣ ನಿರ್ಮಾಣವಾಗಿದೆ. ಶಿಕ್ಷಕರು ನೆಮ್ಮದಿಯಿಂದ ಕರ್ತವ್ಯ ನಿರ್ವಹಿಸಲು ಅಸಾಧ್ಯವಾಗಿದೆ ಎಂದು ಅಳಲು ತೋಡಿಕೊಂಡರು.
ಪ್ರಸ್ತುತ ರಾಜ್ಯ ಸರ್ಕಾರ ಶಿಕ್ಷಣದ ಬಗ್ಗೆ ಅಪಾರವಾದ ಕಾಳಜಿ ಹೊಂದಿದೆ. `ರಾಷ್ಟ್ರದ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣ'''''''' ಎಂಬಂತೆ ಶಾಲೆಗಳ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸುವ ಮೂಲಕ ಪ್ರಗತಿಯತ್ತ ಕೊಂಡೊಯ್ಯುತ್ತಿರುವುದು ಸಂತಸ ತಂದಿದೆ. ಈ ಹಿನ್ನೆಲೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಶೌಚಾಲಯ ಒಳಗೊಂಡಂತೆ ಸ್ವಚ್ಛತಾ ಸಿಬ್ಬಂದಿಯನ್ನು ನೇಮಿಸುವುದರೊಂದಿಗೆ ಹೊಸ ದಾಖಲೆ ನಿರ್ಮಿಸುವ ಮೂಲಕ ಶಿಕ್ಷಣ ಸಬಲೀಕರಣಗೊಳಿಸುವಂತೆ ಮನವಿ ಮಾಡಲಾಗಿದೆ.ಸಂಘದ ಅಧ್ಯಕ್ಷ ಟಿ.ಪೃಥ್ವಿರಾಜ್, ಪ್ರಧಾನ ಕಾರ್ಯದರ್ಶಿ ಎಸ್.ಕೆ. ಮೋಹನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಧರಗೌಡ, ಮಹಿಳಾ ಘಟಕದ ಅಧ್ಯಕ್ಷೆ ಭಾರತಿ, ಸಂಘದ ಪದಾಧಿಕಾರಿಗಳು, ನಿರ್ದೇಶಕರಾದ ಹನುಮಂತಪ್ಪ, ಸುಮತಿ ಕಾರಂತ್, ಮಾಯಮ್ಮ, ಲೋಲಾಕ್ಷಿ, ಕೋಕಿಲ, ಶಿವಕುಮಾರ್, ಸೌಭಾಗ್ಯ, ರಾಜಾನಾಯ್ಕ ಹಾಗೂ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವಿ.ಎಚ್. ಪಂಚಾಕ್ಷರಿ ಇನ್ನಿತರರು ಉಪಸ್ಥಿತರಿದ್ದರು.
ತಹಸೀಲ್ದಾರ್ ಕೆ.ಆರ್. ನಾಗರಾಜು, ತಾಪಂ ಇಒ ಎಂ.ಗಂಗಣ್ಣ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.- - - -ಡಿ7ಬಿಡಿವಿಟಿ:
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಶೌಚಾಲಯ, ಸ್ವಚ್ಛತಾ ಸಿಬ್ಬಂದಿ ನೇಮಿಸಲು ಆಗ್ರಹಿಸಿ ಭದ್ರಾವತಿಯಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.