ಪ್ರತಿಯೊಬ್ಬರೂ ಸಂವಿಧಾನದ ಅಡಿಯಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕು. ಸಂವಿಧಾನದ ಮುಖ್ಯ ಉದ್ದೇಶ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕುಗಳನ್ನು ಒದಗಿಸುವುದಾಗಿದೆ.

ಕುಷ್ಟಗಿಯಲ್ಲಿ ಸಂವಿಧಾನ ದಿನಾಚರಣೆ

ಕನ್ನಡಪ್ರಭ ವಾರ್ತೆ ಕುಷ್ಟಗಿ

ಪ್ರತಿಯೊಬ್ಬರೂ ಸಂವಿಧಾನದ ಅಡಿಯಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕು. ಸಂವಿಧಾನದ ಮುಖ್ಯ ಉದ್ದೇಶ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕುಗಳನ್ನು ಒದಗಿಸುವುದಾಗಿದೆ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶ ಎಂ.ಎಲ್. ಪೂಜೇರಿ ಹೇಳಿದರು.

ಪಟ್ಟಣದ ತಹಸೀಲ್ದಾರ್ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಮತ್ತು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ನಾವೆಲ್ಲರೂ ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯನಿರ್ವಹಿಸಬೇಕು. ಜನಪ್ರತಿನಿಧಿಗಳಾಗಲಿ, ನ್ಯಾಯಾಧೀಶರಾಗಲಿ ಅಥವಾ ಅಧಿಕಾರಿಗಳಾಗಲಿ ಅಧಿಕಾರ ದುರುಪಯೋಗ ಮಾಡಿಕೊಂಡರೆ ಸಂವಿಧಾನದ ಅಡಿಯಲ್ಲಿ ಶಿಕ್ಷೆಗೆ ಗುರಿಯಾಗುವುದು ಖಚಿತ. ಡಾ. ಬಿ.ಆರ್. ಅಂಬೇಡ್ಕರ್ ಅವರ ಶ್ರಮದ ಫಲವಾಗಿ ಸಂವಿಧಾನ ರಚನೆಯಾಗಿದ್ದು, ಅದರ ಮೂಲಕ ಕಾನೂನು ರಚನೆ ಸೇರಿದಂತೆ ನಾಗರಿಕರಿಗೆ ವಿವಿಧ ಹಕ್ಕುಗಳನ್ನು ಕಲ್ಪಿಸಲಾಗಿದೆ ಎಂದರು.

ತಾಪಂ ಇಒ ಅಮರೇಶ ಮಾತನಾಡಿ, ದೇಹಕ್ಕೆ ಆತ್ಮ ಎಷ್ಟು ಮುಖ್ಯವೋ ದೇಶಕ್ಕೆ ಸಂವಿಧಾನ ಅಷ್ಟೇ ಮುಖ್ಯ. ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ರೇಡ್-2 ತಹಸೀಲ್ದಾರ್ ರಜನಿಕಾಂತ್ ಮಾತನಾಡಿ, ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಆಶಯಗಳಂತೆ ಬದುಕು ಕಟ್ಟಿಕೊಳ್ಳುವ ಮೂಲಕ ಸಂವಿಧಾನ ದಿನದ ಮಹತ್ವ ಸಾರಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ತುಗ್ಲೆಪ್ಪ ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪಿಎಸ್ಐ ಹನುಮಂತಪ್ಪ ತಳವಾರ ಸಂವಿಧಾನದ ಪೀಠಿಕೆ ಬೋಧಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಿಸಿಎಂ ಇಲಾಖೆ ಅಧಿಕಾರಿ ಬಸವರಾಜ ನೆಲಗಣಿ, ಸಿಡಿಪಿಒ ಯಲ್ಲಮ್ಮ ಹಂಡಿ, ಪುರಸಭೆ ಮುಖ್ಯಾಧಿಕಾರಿ ವೆಂಕಪ್ಪ ಬೀಳಗಿ, ದೈಹಿಕ ಶಿಕ್ಷಣಾಧಿಕಾರಿ ನಾಗಪ್ಪ ಬಿಳಿಯಪ್ಪನವರ ಉಪಸ್ಥಿತರಿದ್ದರು.