ಸಾರಾಂಶ
ಹೊಸದುರ್ಗ ತಾಲೂಕಿನ ಬೆಲಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಾಸಕ ಬಿ.ಜಿ.ಗೋವಿಂದಪ್ಪ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಹೊಸದುರ್ಗ
ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ. ಗೋವಿಂದಪ್ಪ ಹೇಳಿದರು. ತಾಲೂಕಿನ ಬೆಲಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸರ್ಕಾರ ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿದೆ. ಸರ್ವರಿಗೂ ಅನ್ನ ಆಶ್ರಯ ಶಿಕ್ಷಣದ ಜೊತೆಗೆ ಆರೋಗ್ಯ ಸಿಗುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಮಕ್ಕಳು ಅಂಗವಿಕಲದಿಂದ ಬಳಲದಂತೆ ನೋಡಿಕೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲಾ ತಾಯಂದಿರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಕರೆ ನೀಡಿದರು. ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳನ್ನ ಮೇಲ್ದರ್ಜೆಗೇರಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸ್ತ್ರೀರೋಗ ತಜ್ಞರು ಮಕ್ಕಳ ತಜ್ಞರು ಲಭ್ಯವಾಗುವಂತೆ ನೋಡಿಕೊಳ್ಳಲಾಗಿದೆ. ತಾಯಿ ಮಕ್ಕಳ ಆರೋಗ್ಯಕ್ಕೆ ಗ್ರಾಮೀಣ ಜನರು ನಗರ ಪ್ರದೇಶಗಳತ್ತ ಹೋಗದಂತೆ ಎಲ್ಲಾ ಸೇವೆ ಗಳನ್ನು ಗ್ರಾಮೀಣ ಪ್ರದೇಶದಲ್ಲಿ ನೀಡಲಾಗುತ್ತಿದೆ ಎಂದರು. ತಾಲೂಕು ಆರೋಗ್ಯ ಅಧಿಕಾರಿ ರಾಘವೇಂದ್ರ ಪ್ರಸಾದ್ ಮಾತನಾಡಿ, ತಾಲೂಕಿನಾದ್ಯತ ಏಕಕಾಲಕ್ಕೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಐದು ವರ್ಷದೊಳಗಿನ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆತಂದು ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕಾರಿಯಾಗುವಂತೆ ಕರೆ ನೀಡಿದರು. ತಾಲೂಕಿನಲ್ಲಿ 14,857 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ಗುರಿ ಹೊಂದಲಾಗಿದ್ದು, ಲಸಿಕೆ ಹಾಕಲು 172 ತಂಡಗಳನ್ನು, ಹಾಗೂ 48 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ವೀರೇಂದ್ರ ಪಾಟೀಲ್, ಸಿದ್ದರಾಮಪ್ಪ, ಸ್ಥಳೀಯ ಆಸ್ಪತ್ರೆ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.