ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾಮಗಾರಿ: ಆರೋಪ

| Published : Nov 14 2024, 12:50 AM IST

ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾಮಗಾರಿ: ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಕುಶಾಲನಗರ ಮೈಸೂರು ರಸ್ತೆ ಬದಿಯಲ್ಲಿ ಪುರಸಭೆ ಅನುಮತಿ ಪಡೆಯದೆ ರಾಷ್ಟ್ರೀಯ ಹೆದ್ದಾರಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕುಶಾಲನಗರ ಮೈಸೂರು ರಸ್ತೆಯ ಬದಿಯಲ್ಲಿ ಪುರಸಭೆ ಅನುಮತಿ ಪಡೆಯದೆ ರಾಷ್ಟ್ರೀಯ ಹೆದ್ದಾರಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದ್ದಾರೆ ಎಂದು ಕುಶಾಲನಗರ ದಂಡಿನಪೇಟೆ ನಿವಾಸಿಗಳು ಆರೋಪ ವ್ಯಕ್ತಪಡಿಸಿದ್ದಾರೆ.

ನಿವಾಸಿಗಳಾದ ಅಬ್ದುಲ್ ಮುಮ್ತಾಜ್, ಮಹಮ್ಮದ್ ಅಫಝರ್, ಅಬ್ದುಲ್ ವಾಜಿದ್ ಮತ್ತು ನೂರುಲ್ಲಾ ಅವರು ಕುಶಾಲನಗರ ಪತ್ರಿಕಾ ಭವನದಲ್ಲಿ ಈ ಬಗ್ಗೆ ದಾಖಲೆ ಸಹಿತ ಮಾಹಿತಿ ನೀಡಿದ್ದು, ಪುರಸಭೆ ಅಧಿಕಾರಿಗಳು ಮೌನ ವಹಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿ ರಸ್ತೆ ಬದಿಯಲ್ಲಿ ಆರ್ ಸಿ ಸಿ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು, ಹೆದ್ದಾರಿ ನಿಯಮ ಉಲ್ಲಂಘನೆ ಮಾಡಿರುವುದಾಗಿ ತಿಳಿಸಿದ್ದಾರೆ.

ಇದರಿಂದ ಸಾರ್ವಜನಿಕರಿಗೆ ಓಡಾಡಲು ತೊಂದರೆ ಉಂಟಾಗುತ್ತಿದ್ದು ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ಲಿಖಿತವಾಗಿ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ತಿಳಿಸಿರುವ ದಂಡಿನಪೇಟೆ ನಿವಾಸಿ ನೂರುಲ್ಲಾ, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೂ ದೂರು ನೀಡಲಾಗಿದೆ. ನೂತನ ಕಟ್ಟಡ ಕಾಮಗಾರಿಗೆ ಯಾವುದೇ ರೀತಿಯ ಅನುಮತಿ ಪಡೆಯದಿದ್ದರೂ ಹಗಲು ರಾತ್ರಿ ಕೆಲಸ ನಿರ್ವಹಿಸುತ್ತಿರುವುದು ಕಂಡುಬಂದಿದೆ ಎಂದಿದ್ದಾರೆ.

ಕೂಡಲೇ ಕಾಮಗಾರಿಯನ್ನು ಸ್ಥಗಿತಗೊಳಿಸಲು ಪುರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ದಂಡಿನಪೇಟೆ ನಿವಾಸಿ ಅಬ್ದುಲ್ ಮುಮ್ತಾಜ್, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ನಿಯಮಬಾಹಿರ ಕಟ್ಟಡಗಳು ಕುಶಾಲನಗರ ಪಟ್ಟಣದಲ್ಲಿ ನಿರ್ಮಾಣಗೊಳ್ಳುತ್ತಿವೆ. ಇದರಿಂದ ಹೆದ್ದಾರಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಹಾಗೂ ಜನರಿಗೆ ಓಡಾಡಲು ಅನಾನುಕೂಲ ಉಂಟಾಗುತ್ತಿದೆ. ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಪುರಸಭೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.