ಲೀಡ್‌.. ಕಾಮನ್‌ ಪುಟಕ್ಕೆಆಕಾಶದಲ್ಲಿ ಬೆಳಕಿನ ಚಿತ್ತಾರ ಮೂಡಿಸಿದ 1500 ಡ್ರೋನ್ ಗಳು...- ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ಸೆಸ್ಕ್ ವತಿಯಿಂದ ಡ್ರೋನ್ ಪ್ರದರ್ಶನ

| Published : Oct 07 2024, 01:36 AM IST

ಲೀಡ್‌.. ಕಾಮನ್‌ ಪುಟಕ್ಕೆಆಕಾಶದಲ್ಲಿ ಬೆಳಕಿನ ಚಿತ್ತಾರ ಮೂಡಿಸಿದ 1500 ಡ್ರೋನ್ ಗಳು...- ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ಸೆಸ್ಕ್ ವತಿಯಿಂದ ಡ್ರೋನ್ ಪ್ರದರ್ಶನ
Share this Article
  • FB
  • TW
  • Linkdin
  • Email

ಸಾರಾಂಶ

ಮೈಸೂರು,ವಿಶ್ವವಿಖ್ಯಾತ ದಸರಾ ಮಹೋತ್ಸವ

ಕನ್ನಡಪ್ರಭ ವಾರ್ತೆ ಮೈಸೂರುವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಭಾನುವಾರ ರಾತ್ರಿ ಆಯೋಜಿಸಿದ್ದ ಡ್ರೋನ್ ಪ್ರದರ್ಶನವು ಆಕಾಶದಲ್ಲಿ ಬೆಳಕಿನ ಚಿತ್ತಾರ ಮೂಡಿಸುವ ಮೂಲಕ ನೋಡುಗರನ್ನು ವಿಸ್ಮಯಗೊಳಿಸಿತು.ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ವತಿಯಿಂದ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಡ್ರೋನ್ ಪ್ರದರ್ಶನವನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಚಾಲನೆ ನೀಡಿದರು.ಬಳಿಕ ನಡೆದ ಡ್ರೋನ್ ಪ್ರದರ್ಶನದಲ್ಲಿ 1500 ಡ್ರೋನ್ ಗಳು ಏಕಕಾಲದಲ್ಲಿ ಆಗಸದ ಎತ್ತರಕ್ಕೆ ಹಾರಿ ಹಲವು ಬಗೆಯ ಕಲಾಕೃತಿಗಳನ್ನು ರಚಿಸಿದವು. ಬಾಟ್ ಲ್ಯಾಬ್ ಡೈನಮಿಕ್ಸ್ ಸಂಸ್ಥೆ ಸಹಯೋಗದೊಂದಿಗೆ ಈ ಡ್ರೋನ್ ಪ್ರದರ್ಶನ ನಡೆಯಿತು.ರಾತ್ರಿ 8.45ರ ಸುಮಾರಿಗೆ ಆರಂಭವಾದ ಡ್ರೋನ್ ಪ್ರದರ್ಶನದಲ್ಲಿ ರಾಷ್ಟ್ರಧ್ವಜ, ಚಂದ್ರಯಾನ, ವಿಶ್ವಭೂಪಟ, ಸೈನಿಕ, ಕರ್ನಾಟಕ ಭೂಪಟ, ಅಂಬಾರಿ, ಸುವರ್ಣ ಕರ್ನಾಟಕ ಸಂಭ್ರಮ, ಅರಳಿಮರ, ತಿಮಿಂಗಿಲ, ಚಾಮುಂಡೇಶ್ವರಿ ಸೇರಿದಂತೆ 15 ಹೆಚ್ಚು ವಿನ್ಯಾಸಗಳನ್ನು ರಚಿಸುವ ಮೂಲಕ ನೆರೆದಿದ್ದ ಜನರಿಗೆ ನಿರೀಕ್ಷೆಗೂ ಮೀರಿದ ಅನುಭವ ನೀಡಿತು. ಡ್ರೋನ್ ಪ್ರದರ್ಶನವನ್ನು ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಜನರು ಕಿಕ್ಕಿರಿದು ತುಂಬಿದ್ದರು. ರಾಜೇಶ್ ಕೃಷ್ಣನ್ ಹಾಡಿನ ಮೋಡಿಡ್ರೋನ್ ಪ್ರದರ್ಶನ ಆರಂಭಕ್ಕೂ ಮುನ್ನ ಖ್ಯಾತ ಹಿನ್ನಲೆ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮವು ನೆರೆದಿದ್ದವರನ್ನು ಮೋಡಿ ಮಾಡಿತು. ತಮ್ಮ ಸುಮಧುರ ಕಂಠದಿಂದಲೇ‌ಕನ್ನಡಿಗರ ಮನಗೆದ್ದಿರುವ ರಾಜೇಶ್ ಕೃಷ್ಣನ್, ಉಸಿರೇ ಉಸಿರೇ..., ಜೊತೆಯಲಿ ಜೊತೆ ಜೊತೆಯಲಿ..., ಯಾರೋ ಕಣ್ಣಲ್ಲಿ ಕಣ್ಣನಿಟ್ಟು..., ಕುಚಿಕ್ಕು ಕುಚ್ಚಿಕು..., ಕೂರಕ್ ಕುಕ್ಕರಹಳ್ಳಿಕೆರೆ ಸೇರಿದಂತೆ ಹಲವು ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದರು. ಶಾಸಕರಾದ ತನ್ವೀರ್ ಸೇಠ್, ಪಿ. ನರೇಂದ್ರಸ್ವಾಮಿ, ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ, ಮಾಜಿ ಶಾಸಕ ಎಂ.ಕೆ. ‌ಸೋಮಶೇಖರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಬಿ. ಪುಷ್ಪಾ ಅಮರನಾಥ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ‌ವಿಭಾಗದ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು, ದಸರಾ ದೀಪಾಲಂಕಾರ ಉಪ ಸಮಿತಿ ಅಧ್ಯಕ್ಷ ಸೈಯದ್ ಇಕ್ಬಾಲ್, ಉಪಾಧ್ಯಕ್ಷರಾದ ಸುಹೇಲ್ ಬೇಗ್, ಕಾಂತರಾಜ್ ಮೊದಲಾದವರು ಇದ್ದರು.