ಕನ್ನಡಪ್ರಭ ವಾರ್ತೆ ಬೆಂಗಳೂರು

ಕೇರಳದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಮರಳಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್‌ನಿಂದ ವಿಜಯೋತ್ಸವ ಆಚರಿಸಲಾಯಿತು.

ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿ ಮುಂಭಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.

ಹುಬ್ಬಳ್ಳಿಯ ಗೋಕುಲ್ ರಸ್ತೆಯ ಖಾಸಗಿ ಹೋಟೆಲ್ ಎದುರು ಗುಲಾಲ ಎರಚಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ಪರಸ್ಪರ ಸಿಹಿ ತಿನಿಸಿ ಸಂಭ್ರಮಿಸಿದರು. ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಪರ ಘೋಷಣೆ ಕೂಗಿ, ಹರ್ಷ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ನೂತನ ಶಾಸಕ ಸಮರ್ಥ್‌, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ದಾವಣಗೆರೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿರುವ ತಮ್ಮ ಅಜ್ಜ ಡಾ.ಶಾಮನೂರು ಶಿವಶಂಕರಪ್ಪನವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸಮರ್ಥ್ ಪೂಜೆ ಸಲ್ಲಿಸಿದರು.


ಬಾಗಲಕೋಟೆಯಲ್ಲಿ ನೂತನ ಶಾಸಕ ಉಮೇಶ ಮೇಟಿ, ಸಚಿವ ಆರ್.ಬಿ.ತಿಮ್ಮಾಪೂರ, ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ಬಾಗಲಕೋಟೆ ಜಿಲ್ಲೆ ಕಮತಗಿ, ಲೋಕಾಪುರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್‌ ಯುವ ಮುಖಂಡರು ಪಟಾಕಿ ಸಿಡಿಸಿ ಸಚಿವ ಸತೀಶ್‌ ಜಾರಕಿಹೊಳಿ ಮತ್ತು ಕೆಪಿಸಿಸಿ ಯೂತ್ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪುರ ಅವರ ಭಾವಚಿತ್ರ ಹಿಡಿದು ಸಂಭ್ರಮಿಸಿದರು. ಸಿಎಂ, ಡಿಸಿಎಂ, ಸಚಿವರಾದ ತಿಮ್ಮಾಪುರ, ಸತೀಶ್‌ಗೆ ಜೈಕಾರ ಹಾಕಿದರು.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಮುಂಡಗೋಡ, ಶಿರಸಿಯಲ್ಲಿ, ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ, ಕೊಪ್ಪಳದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಗುಲಾಲು ಎರಚಿ ವಿಜಯೋತ್ಸವ ಆಚರಿಸಿದರು.