ಸಾರಾಂಶ
ನಗರ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ನಗರ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಉಪಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ ಎಂಬುದಾಗಿ ವಿರೋಧ ಪಕ್ಷದವರು ಹೇಳಿಕೆ ಕೊಟ್ಟಿದ್ದರು. ಈಗ ಜನರೇ ತೀರ್ಪು ನೀಡಿದ್ದು, ಕಾಂಗ್ರೆಸ್ ಅಲೆ ಹೆಚ್ಚಾಗಿದೆ. ರಾಜ್ಯದ ಜನತೆ ಸಿದ್ದರಾಮಯ್ಯ ಹಾಗೂ ಪಕ್ಷದ ಪರವಾಗಿದ್ದಾರೆ ಎಂಬುದಕ್ಕೆ ಇಂದಿನ ಫಲಿತಾಂಶವೇ ಸಾಕ್ಷಿ ಎಂದು ಸಂತಸ ವ್ಯಕ್ತಪಡಿಸಿದರು.ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ, ಉಪ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಸಿಕ್ಕಿದೆ. ಮೂರೂ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಗೆಲುವು ದಾಖಲಿಸಿದ್ದಾರೆ. ಈ ಫಲಿತಾಂಶ ರಾಜ್ಯದ ಜನತೆಗೆ ದಿಕ್ಸೂಚಿಯಾಗಿದೆ ಎಂದರು.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಪಂಚ ಗ್ಯಾರಂಟಿಗಳನ್ನು ರಾಜ್ಯದ ಜನತೆ ಮೆಚ್ಚಿಕೊಂಡಿದ್ದಾರೆ ಎಂಬುದು ಸಾಬೀತಾಗಿದೆ. ಕಾಂಗ್ರೆಸ್ ಸರ್ಕಾರ ಸುಭದ್ರವಾಗಿರಲಿದ್ದು, ಮುಂದಿನ ದಿನಗಳಲ್ಲೂ ಅಭಿವೃದ್ಧಿ ಪರವಾಗಿರಲಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಾಮರ್ಥ್ಯ ಕ್ಷೀಣಿಸಿದ್ದು, ಮುಂದೆ ಅವನತಿ ಕಾಣಲಿದೆ ಎಂದು ಭವಿಷ್ಯ ನುಡಿದರು.ಪಕ್ಷದ ಮುಖಂಡರಾದ ಕಾನೆಹಿತ್ಲು ಮೊಣ್ಣಪ್ಪ, ಜಾನ್ಸನ್ ಪಿಂಟೊ, ಚಂದ್ರಶೇಖರ್, ಲೀಲಾ ಶೇಷಮ್ಮ, ಮುದ್ದುರಾಜ್ ಮತ್ತಿತರರು ಇದ್ದರು.